ಬೆಂಗಳೂರು : ಇಲ್ಲಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸುರಕ್ಷತಾ ಕಾಮಗಾರಿಗಳು ನಡೆಯುತ್ತಿರುವ ಕಾರಣ, ಮುಂಬರುವ ರಣಜಿ ಟ್ರೋಫಿ ಫೈನಲ್ ಪಂದ್ಯವನ್ನು ಹುಬ್ಬಳ್ಳಿಯ ಕೆಎಸ್‌ಸಿಎ ಮೈದಾನಕ್ಕೆ ಸ್ಥಳಾಂತರಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಗುರುವಾರ ಖಚಿತಪಡಿಸಿದೆ. ಎಂಟು ಬಾರಿಯ ಚಾಂಪಿಯನ್ ಕರ್ನಾಟಕ ಮತ್ತು ಇದೇ ಮೊದಲ ಬಾರಿಗೆ ಫೈನಲ್ ಪ್ರವೇಶಿಸಿರುವ ಜಮ್ಮು ಮತ್ತು ಕಾಶ್ಮೀರ ತಂಡಗಳು ಫೆಬ್ರವರಿ 24 ರಿಂದ ಹುಬ್ಬಳ್ಳಿಯಲ್ಲಿ ಟ್ರೋಫಿಗಾಗಿ ಸೆಣಸಾಡಲಿವೆ.
ಚಿನ್ನಸ್ವಾಮಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳೇನು?
ರಾಜ್ಯ ಸರ್ಕಾರ ನೇಮಿಸಿದ ತಜ್ಞರ ಸಮಿತಿ ಮತ್ತು ಇತರ ಶಾಸನಬದ್ಧ ಪ್ರಾಧಿಕಾರಗಳ ಶಿಫಾರಸಿನ ಮೇರೆಗೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವ್ಯಾಪಕ ಮೂಲಸೌಕರ್ಯ ಮತ್ತು ಸುರಕ್ಷತಾ ವೃದ್ಧಿ ಕಾಮಗಾರಿಗಳು ಭರದಿಂದ ಸಾಗುತ್ತಿವೆ. ಪ್ರೇಕ್ಷಕರ ಪ್ರವೇಶ ದ್ವಾರಗಳನ್ನು ಕೆಡವಿ ಅಗಲಗೊಳಿಸಲಾಗುತ್ತಿದೆ ಮತ್ತು ಇತರ ನಿರ್ಣಾಯಕ ಸುಧಾರಣಾ ಕಾರ್ಯಗಳು ನಡೆಯುತ್ತಿವೆ. ಈ ಹಂತದಲ್ಲಿ ಪಂದ್ಯ ಆಯೋಜಿಸಿದರೆ ಪ್ರೇಕ್ಷಕರಿಗೆ ಉತ್ತಮ ವೀಕ್ಷಣಾ ಅನುಭವ ನೀಡಲು ಸಾಧ್ಯವಾಗುವುದಿಲ್ಲ ಎಂಬ ಕಾರಣಕ್ಕೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕೆಎಸ್‌ಸಿಎ ವಕ್ತಾರ ವಿನಯ್ ಮೃತ್ಯುಂಜಯ ತಿಳಿಸಿದ್ದಾರೆ.
ಗ್ರಾಮೀಣ ಭಾಗದಲ್ಲಿ ಕ್ರಿಕೆಟ್ ಉತ್ತೇಜನ
ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ನೇತೃತ್ವದ ನೂತನ ಆಡಳಿತ ಮಂಡಳಿಯು ಕ್ರಿಕೆಟ್ ಅನ್ನು ಕೇವಲ ಬೆಂಗಳೂರಿಗೆ ಸೀಮಿತಗೊಳಿಸದೆ ರಾಜ್ಯದಾದ್ಯಂತ ವಿಸ್ತರಿಸುವ ಗುರಿ ಹೊಂದಿದೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿಯಲ್ಲಿ ಫೈನಲ್ ಪಂದ್ಯ ಆಯೋಜಿಸುತ್ತಿರುವುದು ಪ್ರಾದೇಶಿಕ ಅಭಿಮಾನಿಗಳಲ್ಲಿ ಕ್ರಿಕೆಟ್ ಬಗ್ಗೆ ಆಸಕ್ತಿ ಮೂಡಿಸಲು ಮತ್ತು ಕ್ರೀಡಾ ಪರಿಸರವನ್ನು ಬಲಪಡಿಸಲು ಸಹಕಾರಿಯಾಗಲಿದೆ ಎಂದು ಮೃತ್ಯುಂಜಯ ಅಭಿಪ್ರಾಯಪಟ್ಟಿದ್ದಾರೆ.
ಐತಿಹಾಸಿಕ ಫೈನಲ್
ಕರ್ನಾಟಕ ತಂಡವು 2014-15ರ ಸಾಲಿನ ನಂತರ ಇದೇ ಮೊದಲ ಬಾರಿಗೆ ರಣಜಿ ಟ್ರೋಫಿ ಫೈನಲ್ ಪ್ರವೇಶಿಸಿದೆ. ಸೆಮಿಫೈನಲ್‌ನಲ್ಲಿ ಉತ್ತರಾಖಂಡ ವಿರುದ್ಧ ಮೊದಲ ಇನ್ನಿಂಗ್ಸ್ ಮುನ್ನಡೆಯ ಆಧಾರದ ಮೇಲೆ ಕರ್ನಾಟಕ ಫೈನಲ್ ತಲುಪಿದರೆ, ಜಮ್ಮು ಮತ್ತು ಕಾಶ್ಮೀರ ತಂಡವು ಬಂಗಾಳವನ್ನು 6 ವಿಕೆಟ್‌ಗಳಿಂದ ಮಣಿಸಿ ಚೊಚ್ಚಲ ಬಾರಿಗೆ ಪ್ರಶಸ್ತಿ ಸುತ್ತಿಗೆ ಲಗ್ಗೆ ಇಟ್ಟಿದೆ .
ಇದನ್ನೂ ಓದಿ : ಹಿಟ್ & ರನ್‌ಗೆ 6 ವರ್ಷದ ಬಾಲಕಿ ಬ*ಲಿ!



















