ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, 7.10 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ರಾಜ್ಯಾದ್ಯಂತ 1,217 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.
ಮಾರ್ಚ್ 17ರವರೆಗೆ ನಡೆಯಲಿರುವ ಈ ಪರೀಕ್ಷೆಯನ್ನು ಯಾವುದೇ ಅಕ್ರಮ ಅಥವಾ ಗೊಂದಲಗಳಿಲ್ಲದೆ ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ ಕೈಗೊಳ್ಳಲಾಗಿದೆ ಎನ್ನಲಾಗಿದೆ. ಎಲ್ಲಾ ಪರೀಕ್ಷಾ ಕೊಠಡಿಗಳಲ್ಲೂ ಸಿಸಿ ಕ್ಯಾಮರಾ ಕಣ್ಗಾವಲು ವ್ಯವಸ್ಥೆ ಮಾಡಲಾಗಿದ್ದು, ಜಿಲ್ಲಾ ಕೇಂದ್ರಗಳಲ್ಲಿ ವೆಬ್‌ಕಾಸ್ಟಿಂಗ್ ಮೂಲಕ ಯಾವುದೇ ಕೇಂದ್ರದ ಯಾವುದೇ ಕೊಠಡಿಯನ್ನು ನೇರವಾಗಿ ವೀಕ್ಷಿಸುವ ವ್ಯವಸ್ಥೆ ಕಲ್ಪಿಸಲಾಗಿದೆ ಎಂಬಮಾಹಿತಿ ಲಭ್ಯವಾಗಿದೆ.
ಒಟ್ಟು ನೋಂದಾಯಿತ ವಿದ್ಯಾರ್ಥಿಗಳಲ್ಲಿ 6,46,801 ಮಂದಿ ಫ್ರೆಷರ್ಸ್, 50,540 ಮಂದಿ ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ 13,022 ಮಂದಿ ಖಾಸಗಿ ಅಭ್ಯರ್ಥಿಗಳಾಗಿದ್ದಾರೆ. ವಿಭಾಗವಾರು ನೋಂದಣಿಯಲ್ಲಿ ವಿಜ್ಞಾನ ವಿಭಾಗದಲ್ಲಿ ಅತಿ ಹೆಚ್ಚು 2,92,645 ವಿದ್ಯಾರ್ಥಿಗಳು ಇದ್ದರೆ, ವಾಣಿಜ್ಯ ವಿಭಾಗದಲ್ಲಿ 2,11,174 ಮತ್ತು ಕಲಾ ವಿಭಾಗದಲ್ಲಿ 1,42,982 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎನ್ನಲಾಗಿದೆ.
ಬಿಗಿ ಭದ್ರತಾ ವ್ಯವಸ್ಥೆ, ಕಟ್ಟುನಿಟ್ಟಿನ ಮೇಲ್ವಿಚಾರಣೆ ಮತ್ತು ತಾಂತ್ರಿಕ ನಿಗಾದೊಂದಿಗೆ ಪರೀಕ್ಷೆಗಳನ್ನು ಶಾಂತಿಯುತವಾಗಿ ನಡೆಸಲು ಶಿಕ್ಷಣ ಇಲಾಖೆ ಸಜ್ಜಾಗಿದೆ.
ಇದನನ ಓದಿ: ಹೋಳಿ ಹಬ್ಬದ ಆಚರಣೆಗೆ ಪೊಲೀಸ್ ಇಲಾಖೆ ತಯಾರಿ | 15 ಅಂಶಗಳ ಆದೇಶ ಬಿಡುಗಡೆ



















