ನವದೆಹಲಿ: ಕರ್ನಾಟಕ ಸೇರಿದಂತೆ ದೇಶಾದ್ಯಂತ ತಂಬಾಕು ಬೆಳೆಗಾರರ ನೆರವಿಗೆ ಕೇಂದ್ರ ಸರ್ಕಾರ ಧಾವಿಸಿದೆ. ಈ ಸಂಬಂಧ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಇಂದು ಕೇಂದ್ರದ ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ಸಚಿವರಾದ ಪಿಯೂಷ್ ಗೋಯಲ್ ಅವರ ಜೊತೆಗೆ ಮಾತುಕತೆ ನಡೆಸಿದರು.
ಸಚಿವ ಗೋಯಲ್ ಅವರಿಗೆ ತಂಬಾಕು ಬೆಳೆಗಾರರ ಸಮಸ್ಯೆಗಳನ್ನು ಮನವರಿಕೆ ಮಾಡಿ ಕೊಡಲಾಯಿತು. ಎಲ್ಲ ಮನವಿಗಳನ್ನು ಸಚಿವರು ಆಲಿಸಿದರಲ್ಲದೆ, ಅವುಗಳನ್ನು ಕೂಡಲೇ ಪರಿಹರಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾದರು ಎಂದು ಕುಮಾರಸ್ವಾಮಿ ಅವರು ತಿಳಿಸಿದರು.
ಸೋಮವಾರದಿಂದಲೇ ತಂಬಾಕು ಖರೀದಿ, ವಿದೇಶ ಮಾರುಕಟ್ಟೆಗಳಿಗೆ ರಫ್ತು, ಹೊಸ ವಿದೇಶಿ ಮಾರುಕಟ್ಟೆಗಳ ಅನ್ವೇಷಣೆ ಸೇರಿದಂತೆ ಬೆಳೆಗಾರ ಬೇಡಿಕೆಗಳಿಗೆ ಸಚಿವರು ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದರು.
ಅಲ್ಲದೆ, ಈ ಸಂದರ್ಭದಲ್ಲಿ ಸೃಷ್ಟಿಯಾಗಿರುವ ಬಿಕ್ಕಟ್ಟಿನ ಶಮನಕ್ಕೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸಚಿವ ಗೋಯಲ್ ಅವರು ತಮ್ಮ ಸಚಿವಾಲಯದ ಉನ್ನತ ಅಧಿಕಾರಿಗಳು ಹಾಗೂ ತಂಬಾಕು ಖರೀದಿಸುವ ಉದ್ಯಮದ ಪ್ರಮುಖರ ಜತೆ ಮಾತನಾಡಿ ಬೆಳೆಗಾರರ ನೆರವಿಗೆ ಬರುವಂತೆ ಸೂಚಿಸಿದರು ಎಂದು ಕುಮಾರಸ್ವಾಮಿ ಅವರು ಮಾಹಿತಿ ನೀಡಿದರು.
ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಸಮ್ಮುಖದಲ್ಲಿ ನಡೆದ ಈ ಸಭೆಯಲ್ಲಿ ಮಾಜಿ ಸಚಿವರಾದ ಸಾ.ರಾ. ಮಹೇಶ್, ಮೈಸೂರು -ಕೊಡಗು ಸಂಸದರಾದ ಯದುವೀರ್ ಚಾಮರಾಜೇಂದ್ರ ಕೃಷ್ಣದತ್ತ ಒಡೆಯರ್, ಕೋಲಾರ ಸಂಸದ ಮಲ್ಲೇಶ್ ಬಾಬು, ಶಾಸಕರಾದ ಎ. ಮಂಜು, ಜಿ.ಡಿ. ಹರೀಶ್ ಗೌಡ, ಸಿ.ಎನ್. ಮಂಜೇಗೌಡ, ಮಾಜಿ ಶಾಸಕರಾದ ಮಹದೇವು, ಅಶ್ವಿನ್ ಕುಮಾರ್ ಅವರು ಹಾಗೂ ವಾಣಿಜ್ಯ ಸಚಿವಾಲಯದ ಉನ್ನತ ಅಧಿಕಾರಿಗಳು ಭಾಗಿಯಾಗಿದ್ದರು.
ಇದನ್ನೂ ಓದಿ ; ಶಿರಾಡಿ ಘಾಟ್ನಲ್ಲಿ ಭೀಕರ ಅಪಘಾತ.. ಮೂವರು ದುರ್ಮರಣ!



















