ಮಡಿಕೇರಿ: ವಿರಾಜಪೇಟೆ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಹಲವು ದಿನಗಳಿಂದ ಆತಂಕ ಸೃಷ್ಟಿಸಿದ್ದ ನರಹಂತಕ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿ ಸೆರೆಹಿಡಿದಿದ್ದಾರೆ.
ಸುಮಾರು 35 ವರ್ಷ ಪ್ರಾಯದ ಈ ಕಾಡಾನೆ ಕಾಫಿ ತೋಟಗಳಲ್ಲಿ ಬೀಡುಬಿಟ್ಟು ಗ್ರಾಮಸ್ಥರಿಗೆ ಉಪಟಳ ನೀಡುತ್ತಿತ್ತು. ಇತ್ತೀಚೆಗೆ ಸಿದ್ದಾಪುರ ಸಮೀಪದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಬೆಳೆಗಾರರೊಬ್ಬರನ್ನು ಬಲಿ ತೆಗೆದುಕೊಂಡಿದ್ದರಿಂದ ಗ್ರಾಮಸ್ಥರಲ್ಲಿ ಭಯ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ಕಾಡಾನೆಯನ್ನು ತಕ್ಷಣ ಸೆರೆಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು.
ಮನವಿಗೆ ಸ್ಪಂದಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಇಂದು ಬೆಳಗ್ಗಿನಿಂದಲೇ ಕಾರ್ಯಾಚರಣೆ ಆರಂಭಿಸಿದರು. ಆರು ಸಾಕಾನೆಗಳ ಸಹಾಯದಿಂದ ಸಿದ್ದಾಪುರ, ಪಾಲಿಬೆಟ್ಟ ಹಾಗೂ ಅಮ್ಮತ್ತಿ ಸುತ್ತಮುತ್ತಲ ಕಾಫಿ ತೋಟಗಳಲ್ಲಿ ವ್ಯಾಪಕ ಶೋಧ ಕಾರ್ಯ ನಡೆಸಲಾಯಿತು.
ಈ ವೇಳೆ ಚೆನ್ನೈನಕೋಟೆ ಬಾಡಗ ಬಾಣಂಗಾಲ ಸಮೀಪದ ಕಾಫಿ ತೋಟದಲ್ಲಿ ಒಂಟಿ ಸಲಗ ಪತ್ತೆಯಾಯಿತು. ಬಳಿಕ ಅರಣ್ಯ ಇಲಾಖೆ ಸಿಬ್ಬಂದಿ ಅರವಳಿಕೆ (ಟ್ರಾಂಕ್ವಿಲೈಸರ್) ನೀಡಿ ಕಾಡಾನೆಯನ್ನು ಯಶಸ್ವಿಯಾಗಿ ಸೆರೆಹಿಡಿದರು. ನರಹಂತಕ ಕಾಡಾನೆ ಸೆರೆಯಾಗಿರುವ ಹಿನ್ನೆಲೆಯಲ್ಲಿ ಹಲವು ದಿನಗಳಿಂದ ಆತಂಕದಲ್ಲಿದ್ದ ಗ್ರಾಮಸ್ಥರು ಈಗ ನಿಟ್ಟುಸಿರು ಬಿಟ್ಟಿದ್ದಾರೆ.
ಇದನ್ನೂ ಓದಿ : ಮೈಸೂರು | ಫಾರಂಹೌಸ್‌ಗೆ ನುಗ್ಗಿ ನಾಯಿ ಮೇಲೆ ಚಿರತೆ ಅಟ್ಯಾಕ್!



















