ದುಬೈ : ಇರಾನ್-ಅಮೆರಿಕ ಯುದ್ಧ ಸದ್ಯಕ್ಕೆ ನಿಲ್ಲುವ ಲಕ್ಷಣಗಳು ಕಾಣಿಸುತ್ತಿಲ್ಲ. ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ದಿನೇ ದಿನೆ ಹೆಚ್ಚುತ್ತಿದ್ದು ಇಂದು ಮುಂಜಾನೆ ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (DXB) ಸಮೀಪವಿರುವ ತೈಲ ಟ್ಯಾಂಕರ್ ಒಂದರ ಮೇಲೆ ಇರಾನ್ ಡ್ರೋನ್ ದಾಳಿ ನಡೆಸಿದೆ. ದಾಳಿಯ ಬೆನ್ನಲ್ಲೇ ದಟ್ಟ ಬೆಂಕಿ ಕಾಣಿಸಿಕೊಂಡಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ವಿಮಾನ ನಿಲ್ದಾಣದ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಘಟನೆ ನಡೆದ ಕೂಡಲೇ ದುಬೈ ಸಿವಿಲ್ ಡಿಫೆನ್ಸ್ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿವೆ. ದುಬೈ ಮಾಧ್ಯಮ ಕಚೇರಿಯ ವರದಿಯ ಪ್ರಕಾರ, ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ವಿಮಾನ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ತಕ್ಷಣವೇ ಕಟ್ಟುನಿಟ್ಟಿನ ಸುರಕ್ಷತಾ ಕ್ರಮಗಳನ್ನು ಜಾರಿಗೊಳಿಸಲಾಗಿದ್ದು, ಸಾರ್ವಜನಿಕರು ಮತ್ತು ಸಿಬ್ಬಂದಿಯ ರಕ್ಷಣೆಗೆ ಆದ್ಯತೆ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿಮಾನಗಳ ಮಾರ್ಗ ಬದಲಾವಣೆ
ಸುರಕ್ಷತೆಯ ದೃಷ್ಟಿಯಿಂದ ದುಬೈ ನಾಗರಿಕ ವಿಮಾನಯಾನ ಪ್ರಾಧಿಕಾರವು ವಿಮಾನ ನಿಲ್ದಾಣವನ್ನು ತಾತ್ಕಾಲಿಕವಾಗಿ ಮುಚ್ಚಲು ನಿರ್ಧರಿಸಿದೆ. ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರಬೇಕಿದ್ದ ಹಲವಾರು ವಿಮಾನಗಳನ್ನು ಅಲ್ ಮಕ್ತೂಮ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (DWC) ತಿರುಗಿಸಲಾಗಿದೆ. ಈ ಅನಿರೀಕ್ಷಿತ ಘಟನೆಯಿಂದಾಗಿ ಪ್ರಯಾಣಿಕರು ತಮ್ಮ ವಿಮಾನಗಳ ಹಾರಾಟದ ಕುರಿತು ಮಾಹಿತಿ ಪಡೆಯಲು ಆಯಾ ಏರ್‌ಲೈನ್ಸ್‌ಗಳನ್ನು ಸಂಪರ್ಕಿಸುವಂತೆ ಸೂಚಿಸಲಾಗಿದೆ. ಇನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಿಮಾನ ನಿಲ್ದಾಣದ ರಸ್ತೆ ಮತ್ತು ಸುರಂಗ ಮಾರ್ಗಗಳನ್ನು ಪೊಲೀಸರು ಬಂದ್ ಮಾಡಿದ್ದಾರೆ.
ಗಂಭೀರ ಸ್ವರೂಪ ಪಡೆದ ಪ್ರಾದೇಶಿಕ ಸಂಘರ್ಷ
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಆರಂಭದಿಂದಲೂ ಯುನೈಟೆಡ್ ಅರಬ್ ಎಮಿರೇಟ್ಸ್ (UAE) ಮೇಲೆ ಇರಾನ್ ನಿರಂತರವಾಗಿ ದಾಳಿ ನಡೆಸುತ್ತಾ ಬಂದಿದೆ. ವರದಿಗಳ ಪ್ರಕಾರ, ಇದುವರೆಗೆ ಇರಾನ್ ಸುಮಾರು 1,800ಕ್ಕೂ ಹೆಚ್ಚು ಕ್ಷಿಪಣಿ ಮತ್ತು ಡ್ರೋನ್‌ಗಳನ್ನು ಯುಎಇ ಮೇಲೆ ಪ್ರಯೋಗಿಸಿದೆ. ಅಮೆರಿಕ ಮತ್ತು ಇಸ್ರೇಲ್ ನಡೆಸಿದ ದಾಳಿಗಳಿಗೆ ಪ್ರತಿಯಾಗಿ ಇರಾನ್ ಈ ರೀತಿಯ ದಾಳಿಗಳನ್ನು ನಡೆಸುತ್ತಿದೆ ಎಂದು ವಿಶ್ಲೇಷಿಸಲಾಗಿದೆ. ಯುಎಇಯ ವಾಯು ರಕ್ಷಣಾ ವ್ಯವಸ್ಥೆಯು ಹೆಚ್ಚಿನ ದಾಳಿಗಳನ್ನು ತಡೆದಿದ್ದರೂ, ನಾಗರಿಕ ಮೂಲಸೌಕರ್ಯಗಳ ಮೇಲೆ ನಡೆಯುತ್ತಿರುವ ಈ ದಾಳಿಗಳು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿವೆ.
ಇದನ್ನೂ ಓದಿ : 110 ಅಡಿಗೆ ಇಳಿದ ಕೆಆರ್‌ಎಸ್ ಜಲಾಶಯ! ನೀರಿನ ಸಮಸ್ಯೆ ಉಂಟಾಗುತ್ತಾ?



















