ಉಡುಪಿ : ನಿಂತಿದ್ದ ಕಂಟೈನರ್‌ಗೆ ಕಾರು ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ತಾಯಿ ಹಾಗೂ ಮಗಳು ದಾರುಣವಾಗಿ ಮೃತಪಟ್ಟಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾವುಂದ ಬಳಿ ನಡೆದಿದೆ.
ಅಪಘಾತದಲ್ಲಿ ಮಮತಾ (36) ಹಾಗೂ ಮಗಳು ಧೃತಿಕಾ (14) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪತಿ ರಾಘು (40), ಮಕ್ಕಳಾದ ಜಾಹ್ನವಿ (12), ಚಾರ್ವಿ (10) ಮತ್ತು ಕಾರು ಚಾಲಕ ಕಿರಣ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಆತಂಕಕಾರಿ ಎಂದು ತಿಳಿದುಬಂದಿದೆ. ಮೃತರು ಮತ್ತು ಗಾಯಾಳುಗಳು ಬೆಂಗಳೂರಿನ ನಿವಾಸಿಗಳಾಗಿದ್ದಾರೆ.
ಪ್ರವಾಸಕ್ಕಾಗಿ ಬೆಂಗಳೂರಿನಿಂದ ಬಂದಿದ್ದ ಕುಟುಂಬ ಉಡುಪಿ ಜಿಲ್ಲೆಯ ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡಿದ ಬಳಿಕ ಮುರುಡೇಶ್ವರ ಹಾಗೂ ಗೋಕರ್ಣ ಕ್ಷೇತ್ರಗಳಿಗೆ ತೆರಳುತ್ತಿದ್ದರು. ಈ ವೇಳೆ ಬೈಂದೂರು ಮಾರ್ಗದಲ್ಲಿ ಈ ದುರ್ಘಟನೆ ಸಂಭವಿಸಿದೆ. ಗಾಯಾಳು ತಂದೆ ಮತ್ತು ಇಬ್ಬರು ಮಕ್ಕಳಿಗೆ ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಕಾರು ಚಾಲಕ ಕಿರಣ್ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನೊಂದು ಪ್ರಕರಣದಲ್ಲಿ, ರಸ್ತೆ ದಾಟುತ್ತಿದ್ದ ಪಾದಚಾರಿಗೆ ಬಸ್ ಡಿಕ್ಕಿಯಾದ ಪರಿಣಾಮ ಮಹಿಳೆ ಮೃತಪಟ್ಟಿರುವ ಘಟನೆ ಚಿತ್ರದುರ್ಗ ತಾಲೂಕಿನ ಕುಂಚಿಗನಾಳ್ ಬಳಿ ನಡೆದಿದೆ. ಅಪಘಾತದ ತೀವ್ರತೆಗೆ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಆಕೆಯ ಗುರುತು ಇನ್ನೂ ಪತ್ತೆಯಾಗಿಲ್ಲ. ಈ ಘಟನೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.
ಇದನ್ನೂ ಓದಿ : ಟ್ರಕ್ಗೆ ಗುದ್ದಿ ಹೊತ್ತಿ ಉರಿದ ಕಾರು : ಪವಾಡದಂತೆ ಬದುಕುಳಿದ ಚಾಲಕ


















