ಬೆಂಗಳೂರು, ಮಾ.30: ಭಾನುವಾರ ರಾಜ್ಯದ ಹಲವು ಭಾಗಗಳಲ್ಲಿ ಧಾರಾಕಾರ ಮಳೆ ಸುರಿದ ಹಿನ್ನೆಲೆ ಬಿಸಿಲಿನ ತಾಪಮಾನ ಸ್ವಲ್ಪ ಮಟ್ಟಿಗೆ ಇಳಿಕೆಯಾಗಿದ್ದು, ಇಂದೂ ಸಹ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಕಂಡುಬರುತ್ತಿದ್ದು, ತುಮಕೂರು, ಚಿತ್ರದುರ್ಗ, ಮಂಡ್ಯ, ರಾಮನಗರ, ಮೈಸೂರು, ಕೋಲಾರ ಮತ್ತು ಹಾಸನ ಜಿಲ್ಲೆಗಳಲ್ಲಿ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ನಿನ್ನೆ ಸುರಿದ ಮಳೆಯ ವಿವರ:
- ಬೆಂಗಳೂರು ನಗರ – 18.8 ಮಿಮೀ
- ಎಚ್‌ಎಎಲ್ ವಿಮಾನ ನಿಲ್ದಾಣ – 3.7 ಮಿಮೀ
- ಬೆಂಗಳೂರು ಗ್ರಾಮಾಂತರ – 19.0 ಮಿಮೀ
- ಚಿಂತಾಮಣಿ – 4.5 ಮಿಮೀ
- ಗೋಣಿಕೊಪ್ಪಲ್ – 2.0 ಮಿಮೀ
- ದೊಡ್ಡಬಳ್ಳಾಪುರ – 1.0 ಮಿಮೀ
ಯೆಲ್ಲೋ ಅಲರ್ಟ್ ಘೋಷಣೆ:
ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಹಾವೇರಿ, ದಕ್ಷಿಣ ಕನ್ನಡ, ತುಮಕೂರು, ಹಾಸನ, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಮಂಡ್ಯ, ಮೈಸೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇರುವುದರಿಂದ ಒಟ್ಟು 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಎಲ್ಲೆಲ್ಲಿ ಮಳೆ ಸಾಧ್ಯತೆ?
ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಜೊತೆಗೆ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ನಗರ ಪ್ರದೇಶಗಳಲ್ಲಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಜಾಗರೂಕರಾಗಿರಲು ಸೂಚಿಸಲಾಗಿದೆ.


















