ಧಾರವಾಡ: ಧಾರವಾಡ ನಗರದಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಫೈರೋಜ್ ಪಠಾಣ್ ಕೊಲೆಯಾದ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ.ಧಾರವಾಡ ನಗರದ ಹಾಶ್ಮಿನಗರದಲ್ಲಿರುವ ಫೈರೋಜ್ ಮನೆಗೆ ನುಗ್ಗಿದ ನಾಲ್ವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದಾರೆ.
ಹತ್ಯೆಗೀಡಾದ ಫೈರೋಜ್ ಪಠಾಣ್ ಅವರು ಧಾರವಾಡದ ಮುಂಚೂಣಿಯ ಯುವ ನಾಯಕರಾಗಿದ್ದರು.ಆರಂಭದಲ್ಲಿ ಎನ್‌ಎಸ್‌ಯುಐ ವಿದ್ಯಾರ್ಥಿ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಪ್ರಸ್ತುತ ಯುವ ಕಾಂಗ್ರೆಸ್ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದರು.
ಘಟನೆ ನಡೆದ ವಿಷಯ ತಿಳಿಯುತ್ತಿದ್ದಂತೆಯೇ ಉಪನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು, ಹಂತಕರ ಪತ್ತೆಗಾಗಿ ವಿಶೇಷ ತಂಡವನ್ನು ರಚಿಸಿ ಬಲೆ ಬೀಸಲಾಗಿದೆ. ಫೈರೋಜ್ ಅವರ ಆಪ್ತರು ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸದ್ಯಕ್ಕೆ ಹತ್ಯೆಯ ಹಿಂದೆ ಹಳೆ ವೈಷಮ್ಯವಿದೆಯೇ ಅಥವಾ ರಾಜಕೀಯ ಕಾರಣಗಳಿವೆಯೇ ಎಂಬ ಆಯಾಮದಲ್ಲಿ ತನಿಖೆ ನಡೆಯುತ್ತಿದೆ. ಇನ್ನು ಕೊಲೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.
ಇದನ್ನೂ ಓದಿ : ಹುಲಿಕಲ್ ಘಾಟ್ ದುರಂತ – ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ!


















