ಉಡುಪಿ: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪಾಂಗಳ ಗ್ರಾಮದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿ ಕಾರು ಚಾಲಕ ಮೃತಪಟ್ಟಿದ್ದು ಇಬ್ಬರಿಗೆ ಗಾಯವಾಗಿದೆ.
ಶ್ರೇಯಸ್ ಆಚಾರ್ ಅಪಘಾತದಲ್ಲಿ ಸಾವನ್ನಪ್ಪಿದ ಕಾರು ಚಾಲಕ. ಬಾಗಲಕೋಟೆ ಜಿಲ್ಲೆಯ ಲೋಕಾಪುರದಿಂದ ಮಂಗಳೂರಿಗೆ ಸರಕು ಸಾಗಣೆ ಮಾಡುತ್ತಿದ್ದ ಲಾರಿ ಚಾಲಕ ಮಂಜುನಾಥ ಗೌಡ ಅವರು ಮಂಗಳೂರಿನಲ್ಲಿ ಕೋಕ್ ಲೋಡ್ ಮಾಡಿಕೊಂಡು ಕೊಪ್ಪಳದ ಗಿಣಿಗೇರಿಗೆ ತೆರಳುತ್ತಿದ್ದರು. ಈ ವೇಳೆ ಪಾಂಗಳ ವಿದ್ಯಾವರ್ಧಕ ಶಾಲೆಯ ಎದುರು ಏಕಮುಖ ಸಂಚಾರ ರಸ್ತೆಯಲ್ಲಿ ನಿಧಾನವಾಗಿ ಸಾಗುತ್ತಿದ್ದಾಗ, ಹಿಂಬದಿಯಿಂದ ವೇಗವಾಗಿ ಬಂದ ಕಿಯಾ ಕಾರು ಲಾರಿಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಕಾರು ಚಾಲಕ ಶ್ರೇಯಸ್ ಆಚಾರ್ ಗಂಭೀರವಾಗಿ ಗಾಯಗೊಂಡು ವಾಹನದಲ್ಲೇ ಸಿಲುಕಿಕೊಂಡಿದ್ದರು. ತಕ್ಷಣ ಸ್ಥಳಕ್ಕೆ ಧಾವಿಸಿದ ಸಾರ್ವಜನಿಕರು ಅವರನ್ನು ಆಸ್ಪತ್ರೆಗೆ ಕರೆದೊಯ್ದರೂ, ವೈದ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಇನ್ನೂ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಡಾರ್ವಿನ್ ಹಾಗೂ ಸೂರ್ಯ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಉಡುಪಿಯ ಅಜ್ಜರಕಾಡು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನಾ ಸಂಬಂಧ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಇದನ್ನೂ ಓದಿ; ಮಲೆನಾಡಿನಲ್ಲಿ ಮಳೆ ಅಬ್ಬರ – ಧರೆಗುರುಳಿದ ಮರ, ವಿದ್ಯುತ್ ಕಂಬಗಳು!


















