ಉಡುಪಿ : ಜಿಲ್ಲೆಯ ಪ್ರಸಿದ್ದ ಪ್ರವಾಸಿ ತಾಣವಾದ ಮರವಂತೆ ಬೀಚ್ ಮುಂಭಾಗದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಮಧ್ಯಾಹ್ನ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಪ್ರವಾಸಿಗರಿದ್ದ ಬಸ್ ರಸ್ತೆ ಬದಿಯಲ್ಲಿ ನಿಂತಿದ್ದ ಟ್ಯಾಂಕರ್ಗೆ ಮೊದಲು ಡಿಕ್ಕಿ ಹೊಡೆದು ನಂತರ ಟ್ರಕ್ಗೆ ಅತಿ ವೇಗವಾಗಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಶಿವಮೊಗ್ಗದ ಶಂಕರಘಟ್ಟದ ರಂಭಾಪುರಿ ಕಾಲೇಜಿನ ಬಿಕಾಂ ವಿದ್ಯಾರ್ಥಿಗಳು ಕರಾವಳಿ ಭಾಗಕ್ಕೆ ಪ್ರವಾಸಕ್ಕೆಂದು ಬಂದಿದ್ದರು. ಮುರುಡೇಶ್ವರ ದರ್ಶನ ಮುಗಿಸಿ ಉಡುಪಿಯತ್ತ ಪ್ರಯಾಣಿಸುತ್ತಿದ್ದ ವೇಳೆ, ಮರವಂತೆ ಬೀಚ್ ಮುಂಭಾಗದ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಯಲ್ಲಿದ್ದ ಟ್ಯಾಂಕರ್ಗೆ ಡಿಕ್ಕಿ ಹೊಡೆದು ನಂತರ ಟ್ರಕ್ಗೆ ರಭಸವಾಗಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಅಪಘಾತದ ತೀವ್ರತೆಗೆ ಬಸ್ಸಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಬಸ್ಸಿನಲ್ಲಿ ಒಟ್ಟು 54 ವಿದ್ಯಾರ್ಥಿಗಳು, 4 ಮಂದಿ ಉಪನ್ಯಾಸಕರು, ಇಬ್ಬರು ಅಡುಗೆಯವರು, ಚಾಲಕ, ಕ್ಲೀನರ್ ಇದ್ದರು ಎನ್ನಲಾಗಿದೆ. ಕ್ಲೀನರ್ ಹಾಗೂ ಅಡುಗೆ ಸಹಾಯಕ ಮೃತರಾಗಿದ್ದು, ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಹಲವು ವಿದ್ಯಾರ್ಥಿಗಳನ್ನು ಕುಂದಾಪುರದ ವಿವಿಧ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಘಟನೆ ನಡೆದ ತಕ್ಷಣ ಸ್ಥಳೀಯರು ಹಾಗೂ ಪೊಲೀಸರು ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಕೊಡಗು ಕೇಸ್ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು.. ಉಡುಪಿಯ 32 ಅಕ್ರಮ ಹೋಂ ಸ್ಟೇಗಳ ಮೇಲೆ ದಾಳಿ!



















