ಗದಗ : ಗದಗದಲ್ಲಿ ಮಾಜಿ ಸಿಎಂ, ಸಂಸದ ಬಸವರಾಜ್ ಬೊಮ್ಮಾಯಿ ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಪಕ್ಷವು ಗೊಂದಲದ ಗೂಡಾಗಿದ್ದು, ಅಧಿಕಾರದ ಆಸೆಯಿಂದ ನಾಯಕರ ನಡುವೆ ಗುದ್ದಾಟ ಆರಂಭವಾಗಿದೆ ಎಂದು ಆರೋಪಿಸಿದ್ದಾರೆ.
ಕ್ಯಾಬಿನೆಟ್ ಸಚಿವರು ತಮ್ಮ ಸ್ಥಾನ ಉಳಿಸಿಕೊಳ್ಳಲು ಒದ್ದಾಟ ನಡೆಸುತ್ತಿದ್ದರೆ, ಮೂರು ಬಾರಿ ಆಯ್ಕೆಯಾದ ಶಾಸಕರು ಮಂತ್ರಿ ಸ್ಥಾನಕ್ಕಾಗಿ ಪೈಪೋಟಿ ನಡೆಸುತ್ತಿದ್ದಾರೆ. ಇನ್ನೊಂದೆಡೆ ಹೊಸಬರಿಗೆ ಅವಕಾಶ ನೀಡಬೇಕು ಎಂಬ ಒತ್ತಡವೂ ಪಕ್ಷದೊಳಗೆ ಹೆಚ್ಚಾಗಿದೆ ಎಂದು ಬೊಮ್ಮಾಯಿ ಹೇಳಿದ್ದಾರೆ.
ಮೇಲ್ದರ್ಜೆಯಲ್ಲಿಯೂ ಸಿಎಂ ಸ್ಥಾನಕ್ಕಾಗಿ ಪೈಪೋಟಿ ನಡೆಯುತ್ತಿದ್ದು, ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಿಎಂ ಸ್ಥಾನ ಸಿಗಬೇಕು ಎನ್ನುವ ಅಭಿಪ್ರಾಯವೂ ವ್ಯಕ್ತವಾಗುತ್ತಿದೆ ಎಂದು ತಿಳಿಸಿದ್ದಾರೆ.
ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಹೈಕಮಾಂಡ್ ಎಂದರೆ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮತ್ತು ಖರ್ಗೆ ಎಂದು ಹೇಳುತ್ತಾರೆ. ಆದರೆ ಖರ್ಗೆ ಅವರು ಹೈಕಮಾಂಡ್ ಎಂದರೆ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಎಂದು ಹೇಳುತ್ತಾರೆ. ಇದರಿಂದ ಕಾಂಗ್ರೆಸ್ ಒಂದು ಕುಟುಂಬದ ಆಡಳಿತದಲ್ಲಿರುವ ಪಕ್ಷವಾಗಿದೆ ಎಂಬುದು ಸ್ಪಷ್ಟವಾಗುತ್ತದೆ ಎಂದು ಬೊಮ್ಮಾಯಿ ಟೀಕಿಸಿದ್ದಾರೆ.
ಅಂತಿಮವಾಗಿ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ಅವರ ನಿರ್ಧಾರವೇ ಮೇಲುಗೈ ಸಾಧಿಸುತ್ತಿದ್ದು, ಅದೇ ಸಿಎಂ ಆಯ್ಕೆಗೂ ಕಾರಣವಾಗುತ್ತದೆ, ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ನಾಚಿಕೆಗೇಡಿನ ಸಂಗತಿ. ಜನರು ಆಯ್ಕೆ ಮಾಡಿದ ಪ್ರತಿನಿಧಿಗಳಿಗೆ ಕಾಂಗ್ರೆಸ್ ಪಕ್ಷ ಅಪಮಾನ ಮಾಡುತ್ತಿದೆ ಎಂದು ಬಸವರಾಜ್ ಬೊಮ್ಮಾಯಿ ಕಿಡಿಕಾರಿದ್ದಾರೆ.



















