ಬೆಂಗಳೂರು : ನೈರುತ್ಯ ರೈಲ್ವೆ ಮುಂಬಡ್ತಿ ಪರೀಕ್ಷೆಯಲ್ಲಿ ಈ ಬಾರಿಯೂ ಕನ್ನಡ ಭಾಷೆಯನ್ನು ಕಡೆಗಣಿಸಿರುವುದಕ್ಕೆ ಕನ್ನಡ ರಕ್ಷಣಾ ವೇದಿಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಕೇಂದ್ರ ಸರ್ಕಾರ ಪರೀಕ್ಷೆಯನ್ನು ಕೇವಲ ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಮಾತ್ರ ನಡೆಸಲು ಅವಕಾಶ ಕಲ್ಪಿಸಿರುವುದನ್ನು ಕನ್ನಡಪರ ಸಂಘಟನೆಗಳು ಖಂಡಿಸಿವೆ.
ರೈಲ್ವೆ ಇಲಾಖೆ ಕನ್ನಡಿಗರ ಭಾವನೆಗಳಿಗೆ ಧಕ್ಕೆ ತರುವ ರೀತಿಯಲ್ಲಿ ನಡೆದುಕೊಳ್ಳುತ್ತಿದೆ ಎಂದು ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಆರೋಪಿಸಿದ್ದು, ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡದೇ, ಕೇವಲ ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಮಾತ್ರ ಪರೀಕ್ಷೆ ನಡೆಸಲು ಅವಕಾಶ ಕಲ್ಪಿಸಿರುವುದು ಅಸಹ್ಯಕರ ನಡೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ಸಚಿವ ವಿ. ಸೋಮಣ್ಣ ಅವರ ಇಲಾಖೆಯಲ್ಲಿ ಪದೇಪದೇ ಕನ್ನಡ ವಿರೋಧಿ ಘಟನೆಗಳು ನಡೆಯುತ್ತಿವೆ, ಕನ್ನಡಿಗರಿಗೆ ಅನ್ಯಾಯವಾಗುತ್ತಿರುವುದನ್ನು ಕನ್ನಡ ಪರ ಹೋರಾಟಗಾರರು ತೀವ್ರವಾಗಿ ಖಂಡಿಸುತ್ತೇವೆ ಎಂದು ಪ್ರವೀಣ್ ಶೆಟ್ಟಿ ಹೇಳಿದ್ದಾರೆ.
ಈ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಕ್ಷಣ ಮಧ್ಯಪ್ರವೇಶ ಮಾಡಿ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಬೇಕು, ಕರ್ನಾಟಕದಲ್ಲಿ ನಡೆಯುವ ಪರೀಕ್ಷೆಗಳಲ್ಲಿ ಕನ್ನಡಕ್ಕೂ ಸಮಾನ ಅವಕಾಶ ನೀಡುವುದು ಸರ್ಕಾರದ ಜವಾಬ್ದಾರಿ ಎಂದು ಪ್ರವೀಣ್ ಶೆಟ್ಟಿ ಹೇಳಿದ್ದಾರೆ.
ಇನ್ನು, ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡದಿದ್ದರೆ ನೈರುತ್ಯ ರೈಲ್ವೆ ಇಲಾಖೆಗೆ ಮುತ್ತಿಗೆ ಹಾಕಿ ಉಗ್ರ ಪ್ರತಿಭಟನೆ ನಡೆಸಲಾಗುವುದು, ಕನ್ನಡಿಗರ ಹಕ್ಕುಗಳ ವಿಚಾರದಲ್ಲಿ ಯಾವುದೇ ರೀತಿಯ ತಗ್ಗುಬಗ್ಗು ಇಲ್ಲ, ಕನ್ನಡಿಗರ ಭಾಷಾ ಹಕ್ಕುಗಳನ್ನು ನಿರ್ಲಕ್ಷಿಸುವುದನ್ನು ತಕ್ಷಣ ನಿಲ್ಲಿಸಬೇಕು. ಇಲ್ಲವಾದರೆ ರಾಜ್ಯಾದ್ಯಂತ ಹೋರಾಟ ಉಗ್ರ ಸ್ವರೂಪ ಪಡೆಯಲಿದೆ ಎಂದು ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ : ಚುನಾವಣೆಯ ಉಡುಗೊರೆ ‘ಬೆಲೆ ಏರಿಕೆ’ : ಕೇಂದ್ರ, ರಾಜ್ಯ ಸರ್ಕಾರದ ವಿರುದ್ದ KRS ಪಕ್ಷ ಆಕ್ರೋಶ!


















