ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಐದು ನಗರಪಾಲಿಕೆಗಳ ಚುನಾವಣೆಯನ್ನು ಜೂನ್ 30ರೊಳಗೆ ನಡೆಸಬೇಕೆಂದು ಸುಪ್ರೀಂ ಕೋರ್ಟ್ ನೀಡಿದ್ದ ಗಡುವಿನ ನಡುವೆಯೇ ಇದೀಗ ಚುನಾವಣೆಯನ್ನು ಮುಂದೂಡುವ ಹೊಸ ಬೆಳವಣಿಗೆ ನಡೆದಿದೆ. ರಾಜ್ಯ ಸರ್ಕಾರವು ಆರಂಭದಿಂದಲೂ ಜಿಬಿಎ ಚುನಾವಣೆಯನ್ನು ಮುಂದೂಡಲು ಹಲವು ರೀತಿಯ ಪ್ರಯತ್ನಗಳನ್ನು ನಡೆಸಿದೆ ಎಂಬ ಆರೋಪಗಳು ಕೇಳಿಬರುತ್ತಿದ್ದ ಸಂದರ್ಭದಲ್ಲೇ, ಕಳೆದ ವಾರ ರಾಜ್ಯ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಿ, “ಸುಪ್ರೀಂ ಕೋರ್ಟ್ ಸೂಚಿಸಿದ ಅವಧಿಯೊಳಗೆ ಚುನಾವಣೆಯನ್ನು ನಡೆಸಲು ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಿದ್ದೇವೆ” ಎಂದು ಘೋಷಿಸಿತ್ತು.
ಆದರೆ, ಬದಲಾದ ರಾಜಕೀಯ ತಂತ್ರಗಾರಿಕೆಗಳ ನಡುವೆ ಇದೀಗ ರಾಜ್ಯ ಚುನಾವಣಾ ಆಯೋಗವೇ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿ ಹೆಚ್ಚುವರಿ ಅವಧಿಯನ್ನು ಕೋರಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಅಫಿಡವಿಟ್‌ನಲ್ಲಿ ಜೂನ್ 30ರೊಳಗೆ ಚುನಾವಣೆ ಪೂರ್ಣಗೊಳಿಸುವುದು ಸಾಧ್ಯವಾಗುತ್ತಿಲ್ಲ. ಹೀಗಾಗಿ ಸೆಪ್ಟೆಂಬರ್ 30, 2026ರೊಳಗೆ ಜಿಬಿಎ ಚುನಾವಣೆಯನ್ನು ನಡೆಸಲು ಅವಕಾಶ ನೀಡಬೇಕು ಎಂದು ಆಯೋಗ ಮನವಿ ಮಾಡಿದೆ.
ರಾಜ್ಯ ಚುನಾವಣಾ ಆಯೋಗವು ನ್ಯಾಯಾಲಯಕ್ಕೆ ಸಲ್ಲಿಸಿರುವ ಅಫಿಡವಿಟ್‌ನಲ್ಲಿ, “ಗೌರವಾನ್ವಿತ ನ್ಯಾಯಾಲಯದ ನಿರ್ದೇಶನದಂತೆ ಚುನಾವಣೆಗೆ ಪೂರ್ವಭಾವಿ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಆದರೆ, ಕೇಂದ್ರ ಸರ್ಕಾರ ಘೋಷಿಸಿರುವ ಜನಗಣತಿ ಕಾರ್ಯ ಹಾಗೂ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಕಾರ್ಯಗಳಿಂದ ರಾಜ್ಯ ಸರ್ಕಾರಿ ಅಧಿಕಾರಿಗಳ ಸಂಪೂರ್ಣ ಮಾನವಶಕ್ತಿ ಮತ್ತು ಲಾಜಿಸ್ಟಿಕ್ಸ್ ಬಳಕೆಯಾಗುತ್ತಿದೆ” ಎಂದು ವಿವರಿಸಲಾಗಿದೆ. ಇದರಿಂದಾಗಿ ಚುನಾವಣಾ ಕಾರ್ಯಗಳಿಗೆ ಅಗತ್ಯವಿರುವ ಸಿಬ್ಬಂದಿ ಹಾಗೂ ಆಡಳಿತಾತ್ಮಕ ಸಹಕಾರ ಲಭ್ಯವಾಗುತ್ತಿಲ್ಲ. ಹೀಗಾಗಿ ಚುನಾವಣಾ ಪ್ರಕ್ರಿಯೆಯಲ್ಲಿ ವಿಳಂಬ ಉಂಟಾಗಿದೆ ಎಂದು ಆಯೋಗ ಸ್ಪಷ್ಟಪಡಿಸಿದೆ.
ಇನ್ನೂ ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ-2024ರ ಸೆಕ್ಷನ್ 34(4) ಅನ್ವಯ ಮೇ 8ರಂದು ಜಿಬಿಎ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಗಿದೆ. ಈ ವೇಳೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳು ಕೂಡ ಸೆಪ್ಟೆಂಬರ್ ಅಂತ್ಯದವರೆಗೆ ಚುನಾವಣೆಯನ್ನು ಮುಂದೂಡಲು ಮನವಿ ಮಾಡಿದ್ದಾರೆ ಎಂದು ಅಫಿಡವಿಟ್‌ನಲ್ಲಿ ಉಲ್ಲೇಖಿಸಲಾಗಿದೆ.
“ರಾಜ್ಯ ಚುನಾವಣಾ ಆಯೋಗವು ತನ್ನ ಮಟ್ಟಿಗೆ ಎಲ್ಲಾ ಕ್ರಮಗಳನ್ನು ಕೈಗೊಂಡಿದೆ. ಆದರೆ ಚುನಾವಣೆ ನಡೆಸಲು ರಾಜ್ಯ ಸರ್ಕಾರದ ಸಹಕಾರ ಅತ್ಯಗತ್ಯ. ಜನಗಣತಿ ಹಾಗೂ ಮತದಾರರ ಪಟ್ಟಿಯ ಪರಿಷ್ಕರಣೆಗಾಗಿ ರಾಜ್ಯ ಸರ್ಕಾರ ಈಗಾಗಲೇ ದೊಡ್ಡ ಪ್ರಮಾಣದ ಮಾನವ ಸಂಪನ್ಮೂಲವನ್ನು ನಿಯೋಜಿಸಿರುವುದರಿಂದ ಚುನಾವಣೆಗೆ ಅಗತ್ಯ ಸಿಬ್ಬಂದಿ ಕೊರತೆ ಎದುರಾಗಿದೆ” ಎಂದು ಆಯೋಗ ನ್ಯಾಯಾಲಯದ ಗಮನಕ್ಕೆ ತಂದಿದೆ. ಈ ಹಿನ್ನೆಲೆ ಜಿಬಿಎ ವ್ಯಾಪ್ತಿಯ ಐದು ನಗರಪಾಲಿಕೆಗಳ ಚುನಾವಣೆಯನ್ನು ನಡೆಸಲು ಹೆಚ್ಚುವರಿಯಾಗಿ ಮೂರು ತಿಂಗಳ ಕಾಲಾವಕಾಶ ನೀಡಬೇಕೆಂದು ರಾಜ್ಯ ಚುನಾವಣಾ ಆಯೋಗವು ಸುಪ್ರೀಂ ಕೋರ್ಟ್‌ಗೆ ವಿನಮ್ರ ಮನವಿ ಮಾಡಿದೆ.
ಇದನ್ನೂ ಓದಿ : ಅಧಿಕಾರ ಹಂಚಿಕೆ ಕಿತ್ತಾಟದಲ್ಲಿದ್ದ ಸಿದ್ದು-ಡಿಕೆಗೆ ಎದುರಾಯ್ತು ಅಗ್ನಿಪರೀಕ್ಷೆ!



















