ಬೆಂಗಳೂರು : ನಗರದಲ್ಲಿ ಮತ್ತೊಂದು ಭೀಕರ ಹಿಟ್ ಅಂಡ್ ರನ್ ಪ್ರಕರಣ ಸಂಭವಿಸಿದ್ದು, ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕಜಾಲ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಈ ದುರ್ಘಟನೆಯಲ್ಲಿ ಮೃತ ವ್ಯಕ್ತಿಯ ಪತ್ನಿ ಹಾಗೂ ಪುತ್ರಿಗೂ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತ ವ್ಯಕ್ತಿಯನ್ನು ಮಹೇಶ್ (40) ಎಂದು ಗುರುತಿಸಲಾಗಿದೆ. ಮಹೇಶ್ ತಮ್ಮ ಪತ್ನಿ ಮತ್ತು ಪುತ್ರಿಯೊಂದಿಗೆ ರಾತ್ರಿ ಸುಮಾರು 8.45ರ ವೇಳೆಗೆ ಮದುವೆ ಸಮಾರಂಭ ಮುಗಿಸಿ ವಾಪಸ್ ಮನೆಗೆ ಬರುತ್ತಿದ್ದರು. ಕುಟುಂಬ ಸಮೇತವಾಗಿ ರಸ್ತೆ ದಾಟುವ ವೇಳೆ ವೇಗವಾಗಿ ಬಂದ ಆಡಿ ಕಾರು ಏಕಾಏಕಿ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಅಪಘಾತದ ತೀವ್ರತೆಗೆ ಮಹೇಶ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮಹೇಶ್ ಅವರ ಪತ್ನಿ ಹಾಗೂ ಪುತ್ರಿಗೂ ತೀವ್ರ ಗಾಯಗಳಾಗಿವೆ. ಅಪಘಾತದ ನಂತರ ಸ್ಥಳೀಯರು ತಕ್ಷಣವೇ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದು, ಇಬ್ಬರಿಗೂ ಚಿಕಿತ್ಸೆ ಮುಂದುವರಿದಿದೆ. ಕುಟುಂಬದ ಮೇಲೆ ಸಂಭವಿಸಿದ ಈ ದುರಂತದಿಂದ ಸಂಬಂಧಿಕರು ಹಾಗೂ ಸ್ಥಳೀಯರು ಕಂಗಾಲಾಗಿದ್ದಾರೆ.
ಅಪಘಾತ ಸಂಭವಿಸಿದ ತಕ್ಷಣ ಆಡಿ ಕಾರು ಚಾಲಕ ವಾಹನ ನಿಲ್ಲಿಸದೇ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಗಾಯಾಳುಗಳ ಸ್ಥಿತಿ ಗಂಭೀರವಾಗಿದ್ದರೂ ಯಾವುದೇ ಸಹಾಯ ಮಾಡದೇ ಚಾಲಕ ಎಸ್ಕೇಪ್ ಆಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ವೇಗದ ಚಾಲನೆ ಹಾಗೂ ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣ ಎಂಬ ಮಾತುಗಳು ಕೇಳಿಬರುತ್ತಿವೆ.
ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಚಿಕ್ಕಜಾಲ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಗಾಯಾಳುಗಳ ಆರೋಗ್ಯದ ಬಗ್ಗೆ ಮಾಹಿತಿ ಕಲೆಹಾಕಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಡಿಕ್ಕಿ ಹೊಡೆದು ಪರಾರಿಯಾಗಿರುವ ಆಡಿ ಕಾರು ಹಾಗೂ ಅದರ ಚಾಲಕನಿಗಾಗಿ ಚಿಕ್ಕಜಾಲ ಸಂಚಾರ ಪೊಲೀಸರು ವ್ಯಾಪಕ ಶೋಧ ಕಾರ್ಯ ಆರಂಭಿಸಿದ್ದಾರೆ. ಸಿಸಿಟಿವಿ ದೃಶ್ಯಗಳು, ವಾಹನದ ನಂಬರ್ ಹಾಗೂ ಇತರೆ ತಾಂತ್ರಿಕ ಮಾಹಿತಿಗಳ ಆಧಾರದಲ್ಲಿ ಆರೋಪಿಯನ್ನು ಪತ್ತೆಹಚ್ಚಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.
ಇದನ್ನೂ ಓದಿ : ಹೈಕಮಾಂಡ್ ಭೇಟಿಗೆ ಸಮಯ ಕೇಳಿದ್ರಾ ಸಿಎಂ ಸಿದ್ದರಾಮಯ್ಯ?



















