ಬೆಂಗಳೂರು : ಬೆಂಗಳೂರಿನಲ್ಲಿ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟಾಚಾರದ ವಿರುದ್ಧ ಮತ್ತೊಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಲಂಚ ಪಡೆಯುತ್ತಿದ್ದ ಸರ್ಕಾರಿ ನೌಕರನನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ. ವಿ.ವಿ.ಪುರಂನ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಕೇಸ್ ವರ್ಕರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ರೇಣುಕಾರಾಧ್ಯ ಕೆ.ಎಸ್. ಲೋಕಾಯುಕ್ತ ಬಲೆಗೆ ಬಿದ್ದ ಭ್ರಷ್ಟ ಅಧಿಕಾರಿ.
ಸುರೇಶ್ ಆರ್. ಎಂಬುವರು ತಮ್ಮ ಪಿಂಚಣಿ ಸೌಲಭ್ಯಕ್ಕೆ ಸಂಬಂಧಿಸಿದ ಫೈಲ್ ಮುನ್ನಡೆಸಲು ಹಾಗೂ ಸರ್ವಿಸ್ ಬುಕ್ ಅನ್ನು ಎಜಿ ಕಚೇರಿಗೆ ಕಳುಹಿಸಲು ರೇಣುಕಾರಾಧ್ಯ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಈ ಸಂಬಂಧ 20 ಸಾವಿರ ರೂಪಾಯಿ ಲಂಚ ಪಡೆಯುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಎಸ್ಪಿ ಶಿವಪ್ರಕಾಶ್ ದೇವರಾಜು ನೇತೃತ್ವದಲ್ಲಿ ಡಿಎಸ್ಪಿ ಶ್ರೀನಿವಾಸ್ ಎಂ.ಎಸ್ ಹಾಗೂ ಪಿಐ ಶಂಕರಪ್ಪ ಅವರ ತಂಡ ಕಾರ್ಯಾಚರಣೆ ನಡೆಸಿದ್ದು, ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ರೇಣುಕಾರಾಧ್ಯನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಬಂಧಿತ ಆರೋಪಿಯನ್ನು ವಿಚಾರಣೆಗೆ ಒಳಪಡಿಸಿರುವ ಲೋಕಾಯುಕ್ತ ಅಧಿಕಾರಿಗಳು, ಸ್ಥಳದಲ್ಲೇ ಪರಿಶೀಲನೆ ನಡೆಸಿ ದಾಖಲೆಗಳನ್ನು ಸಂಗ್ರಹಿಸಿದ್ದಾರೆ. ರೇಣುಕಾರಾಧ್ಯ ವಿರುದ್ಧ ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಇದನ್ನೂ ಓದಿ : ಮೈಸೂರಿನಲ್ಲಿ ಕಾರು-ಆಟೋ ಮುಖಾಮುಖಿ ಡಿಕ್ಕಿ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!



















