ಹಾಸನ : ಜಿಲ್ಲೆಯ ಸಕಲೇಶಪುರ ತಾಲೂಕಿನ ಹಾನುಬಾಳು ಸಮೀಪ ಕಾರು ಮತ್ತು ಸಿಎನ್ಜಿ ಆಟೋ ನಡುವೆ ಭೀಕರ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಆಟೋದಲ್ಲಿದ್ದ ನಾಲ್ವರು ಗಾಯಗೊಂಡಿದ್ದಾರೆ. ಡಿಕ್ಕಿಯ ರಭಸಕ್ಕೆ ಸಿಎನ್ಜಿ ಆಟೋ ರಸ್ತೆ ಪಕ್ಕಕ್ಕೆ ಪಲ್ಟಿಯಾಗಿದ್ದು, ಏಕಾಏಕಿ ಹೊತ್ತಿ ಉರಿದಿದೆ.
ನೋಡನೋಡುತ್ತಿದ್ದಂತೆ ಬೆಂಕಿ ವ್ಯಾಪಿಸಿ ಸಿಎನ್ಜಿ ಆಟೋ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಬೆಂಕಿಯ ಜ್ವಾಲೆಗಳು ಎತ್ತರಕ್ಕೆ ಏರಿದ ಪರಿಣಾಮ ಸ್ಥಳೀಯರು ಬೆಚ್ಚಿಬಿದ್ದಿದ್ದು, ಆಟೋ ಸಂಪೂರ್ಣ ಸುಟ್ಟು ಕರಕಲಾಗಿರುವ ದೃಶ್ಯ ವೈರಲ್ ಆಗಿದೆ.
ಅಪಘಾತದಲ್ಲಿ ಗಾಯಗೊಂಡ ನಾಲ್ವರನ್ನು ಸ್ಥಳೀಯರು ತಕ್ಷಣವೇ ರಕ್ಷಣೆ ಮಾಡಿ ಸಕಲೇಶಪುರ ಆಸ್ಪತ್ರೆಗೆ ರವಾನಿಸಿದ್ದಾರೆ. ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ನಡೆಯುತ್ತಿದ್ದಂತೆಯೇ ಸ್ಥಳೀಯರು ಸಮಯಪ್ರಜ್ಞೆ ಮೆರೆದು ಗಾಯಾಳುಗಳನ್ನು ಆಟೋದಿಂದ ಹೊರತೆಗೆದು ಸುರಕ್ಷಿತ ಸ್ಥಳಕ್ಕೆ ಕರೆದೊಯ್ದಿದ್ದಾರೆ. ಬೆಂಕಿ ಹೆಚ್ಚಾಗುವ ಮುನ್ನವೇ ರಕ್ಷಣೆ ಕಾರ್ಯ ನಡೆದ ಕಾರಣ ದೊಡ್ಡ ಅನಾಹುತ ತಪ್ಪಿದಂತಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸಕಲೇಶಪುರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿದಿದ್ದು, ಪ್ರಕರಣ ದಾಖಲಿಸಿಕೊಂಡು ಮ ಕೈಗೊಳ್ಳಲಾಗಿದೆ.
ಇದನ್ನೂ ಓದಿ : ಏರ್ಪೋರ್ಟ್ನಲ್ಲಿ ಬಾಲಿವುಡ್ ಶೈಲಿಯ ದರೋಡೆ : ಏರ್ಲೈನ್ಸ್ ಸಿಬ್ಬಂದಿಯಿಂದಲೇ 2.5 ಕೋಟಿ ರೂ. ಮೌಲ್ಯದ ಚಿನ್ನ ಲೂಟಿ!


















