ಬೀಜಿಂಗ್ : ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಸ್ಫೋಟ ಸಂಭವಿಸಿದ್ದು, ಕನಿಷ್ಠ 82 ಮಂದಿ ಕಾರ್ಮಿಕರು ಸಾವನ್ನಪ್ಪಿ ಇನ್ನೂ ಒಂಬತ್ತು ಮಂದಿ ನಾಪತ್ತೆಯಾಗಿರುವ ಘಟನೆ ದೇಶವನ್ನು ಬೆಚ್ಚಿಬೀಳಿಸಿದೆ.
ಚೀನಾದ ಶಾಂಕ್ಸಿ ಪ್ರಾಂತ್ಯದ ಲಿಯುಶೆನ್ಯು ಕಲ್ಲಿದ್ದಲು ಗಣಿಯಲ್ಲಿ ಶುಕ್ರವಾರ ರಾತ್ರಿ 7.29ರ ಸುಮಾರಿಗೆ ಸ್ಫೋಟ ಸಂಭವಿಸಿದೆ ಎಂದು ಚೀನಾದ ಸರ್ಕಾರಿ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಸ್ಫೋಟ ಸಂಭವಿಸಿದ ವೇಳೆ ಸ್ಥಳದಲ್ಲಿ ಒಟ್ಟು 247 ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದ್ದು, ಇವರಲ್ಲಿ ಬಹುತೇಕ ಮಂದಿಯನ್ನು ರಕ್ಷಣಾ ಸಿಬ್ಬಂದಿ ಸುರಕ್ಷಿತವಾಗಿ ಹೊರತೆಗೆದಿದ್ದಾರೆ. ಆದರೆ, ಘಟನೆಯಲ್ಲಿ 82 ಮಂದಿ ಮೃತಪಟ್ಟಿರುವುದು ದೃಢಪಟ್ಟಿದ್ದು, ಇನ್ನೂ ಒಂಬತ್ತು ಮಂದಿಗಾಗಿ ತೀವ್ರ ಶೋಧ ಕಾರ್ಯ ಮುಂದುವರಿದಿದೆ.
ಚೀನಾದ ಸರ್ಕಾರಿ ವಾಹಿನಿ CCTV ಪ್ರಸಾರ ಮಾಡಿದ ದೃಶ್ಯಗಳಲ್ಲಿ, ರಕ್ಷಣಾ ಸಿಬ್ಬಂದಿ ಸ್ಟ್ರೆಚರ್ಗಳ ಮೂಲಕ ಗಾಯಾಳುಗಳನ್ನು ಹೊರತೆಗೆದುಕೊಳ್ಳುತ್ತಿರುವುದು ಮತ್ತು ಸ್ಥಳದಲ್ಲಿ ಆಂಬುಲೆನ್ಸ್ಗಳು ನಿಂತಿರುವುದು ಕಂಡುಬಂದಿದೆ.
ಘಟನೆಯ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿರುವ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್, ಗಾಯಾಳುಗಳಿಗೆ ತಕ್ಷಣ ಚಿಕಿತ್ಸೆ ನೀಡಲು ಹಾಗೂ ರಕ್ಷಣಾ ಕಾರ್ಯಾಚರಣೆಯನ್ನು ಸಮರೋಪಾದಿಯಲ್ಲಿ ನಡೆಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜೊತೆಗೆ ಈ ದುರಂತದ ಕುರಿತು ಸಮಗ್ರ ತನಿಖೆ ನಡೆಸುವಂತೆ ಆದೇಶಿಸಿದ್ದಾರೆ.
ಇದನ್ನೂ ಓದಿ : ಲೇಹ್ನಲ್ಲಿ ಹೆಲಿಕಾಪ್ಟರ್ ಪತನ : ಸಾವಿನ ದವಡೆಯಿಂದ ಪಾರಾಗಿ ಸೆಲ್ಫಿ ಕ್ಲಿಕ್ಕಿಸಿದ ಮೇಜರ್ ಜನರಲ್!


















