ಬೆಂಗಳೂರು ಕೆ.ಆರ್. ಪುರಂ ಪೊಲೀಸ್ ಕ್ವಾಟ್ರಸ್‌ನಲ್ಲಿ ವರದಕ್ಷಿಣೆ ಕಿರುಕುಳ ಹಿನ್ನೆಲೆ ಗೃಹಿಣಿಯೊಬ್ಬರು ಆತ್ಮಹತ್ಯೆಗೆ ಶರಣಾದ ದುರ್ಘಟನೆ ನಡೆದಿದೆ.
ಲಕ್ಷ್ಮಿಪ್ರಿಯಾ (26) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿಯಾಗಿದ್ದಾರೆ. ಮೂರು ವರ್ಷಗಳ ಹಿಂದೆ ಪೊಲೀಸ್ ಕಾನ್ಸ್‌ಟೇಬಲ್ ರಾಜೇಶ್ ಆರಾಧ್ಯ ಎಂಬಾತನೊಂದಿಗೆ ಲಕ್ಷ್ಮಿಪ್ರಿಯಾ ವಿವಾಹವಾಗಿದ್ದರು. ದಂಪತಿಗೆ ಒಂದು ಮಗು ಕೂಡ ಇದೆ.
ಮಗುವಿನ ಜನನದ ಬಳಿಕ ರಾಜೇಶ್ ಆರಾಧ್ಯ ಅನೈತಿಕ ಸಂಬಂಧ ಹೊಂದಿದ್ದನು ಎನ್ನಲಾಗಿದ್ದು, ಅದನ್ನು ಪ್ರಶ್ನಿಸಿದ್ದಕ್ಕೆ ಲಕ್ಷ್ಮಿಪ್ರಿಯಾ ಅವರಿಗೆ ಮಾನಸಿಕ ಹಿಂಸೆ ನೀಡುತ್ತಿದ್ದ ಆರೋಪ ಕೇಳಿಬಂದಿದೆ. ಇದಲ್ಲದೆ ವರದಕ್ಷಿಣೆ ತರುವಂತೆ ರಾಜೇಶ್ ಹಾಗೂ ಆತನ ಕುಟುಂಬಸ್ಥರು ನಿರಂತರ ಕಿರುಕುಳ ನೀಡುತ್ತಿದ್ದರು ಎಂದು ಮೃತಳ ಕುಟುಂಬಸ್ಥರು ಆರೋಪಿಸಿದ್ದಾರೆ. ಕಿರುಕುಳ ಹಾಗೂ ಚಿತ್ರಹಿಂಸೆ ತಾಳಲಾರದೆ ಲಕ್ಷ್ಮಿಪ್ರಿಯಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಮೃತಳ ತಂದೆ ನೀಡಿದ ದೂರಿನ ಆಧಾರದ ಮೇಲೆ ಕೆ.ಆರ್. ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸ್ ಕಾನ್ಸ್‌ಟೇಬಲ್ ರಾಜೇಶ್ ಆರಾಧ್ಯ, ಆತನ ತಂದೆ ಪಾಲಾಕ್ಷ್ಯಾಧ್ಯ, ತಾಯಿ ಭಾಗ್ಯ ಹಾಗೂ ಸಹೋದರಿ ರೇಖಾ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


















