ಲಕ್ನೋ : ಚಂಡಮಾರುತದ ಅಬ್ಬರಕ್ಕೆ ಸಿಕ್ಕಿ ಬೆಟ್ಟಾ ನದಿಯ ಮೇಲೆ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು 6 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ನಡೆದಿದೆ.
ಘಟನೆಯಲ್ಲಿ ಈವರೆಗೆ 6 ಕಾರ್ಮಿಕರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನೂ ಅನೇಕರು ಅವಶೇಷಗಳ ಅಡಿಯಲ್ಲೇ ಸಿಲುಕಿರುವ ಶಂಕೆ ಇದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಸ್ಥಳೀಯ ಆಡಳಿತ ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಆಗಮಿಸಿದ್ದು, ಅವಶೇಷಗಳ ಅಡಿಯಲ್ಲಿ ಸಿಲುಕಿರುವವರ ರಕ್ಷಣೆಗೆ ಬೃಹತ್ ಕಾರ್ಯಾಚರಣೆ ಕೈಗೊಂಡಿವೆ.
ಲಾಲ್‌ಪುರ ಪೊಲೀಸ್ ಠಾಣೆ ಪ್ರದೇಶದ ಮೊರಕಂದರ್ ಮತ್ತು ಕುರಾರಾದ ಮಾವೈಜರ್ ಪ್ರದೇಶವನ್ನು ಸಂಪರ್ಕಿಸಲು ಈ ಸೇತುವೆಯನ್ನು ನಿರ್ಮಿಸಲಾಗುತ್ತಿತ್ತು. ದುರಂತದ ನಂತರ, ಹಲವಾರು ಪೊಲೀಸ್ ಠಾಣೆಗಳ ಪೊಲೀಸರು ಮತ್ತು ಸ್ಥಳೀಯ ನಿವಾಸಿಗಳು ಅವಶೇಷಗಳ ಅಡಿಯಲ್ಲಿ ಸಿಲುಕಿರುವವರನ್ನು ರಕ್ಷಿಸಲು ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಉತ್ತರ ಪ್ರದೇಶದಲ್ಲಿ ಕೇವಲ ಒಂದು ಗಾಳಿಗೆ ಸೇತುವೆ ಬೀಳುತ್ತಿದೆ ಅಂದರೆ, ಇದರ ನಿರ್ಮಾಣದ ಗುಣಮಟ್ಟದ ಬಗ್ಗೆಯೂ ಗಂಭೀರ ಪ್ರಶ್ನೆಗಳು ಎದ್ದಿವೆ.
ಇಂದು ಬೆಳಗಿನ ಜಾವ 3:00 ಗಂಟೆ ಸುಮಾರಿಗೆ ಈ ದುರಂತ ಸಂಭವಿಸಿದ್ದು, ಈ ಸಮಯದಲ್ಲಿ ಹಲವಾರು ಕಾರ್ಮಿಕರು ಸೇತುವೆಯ ಕೆಳಗೆ ಮಲಗಿದ್ದರು. ಈ ಕಾರ್ಮಿಕರು ಬೆಳಿಗ್ಗೆ ಎದ್ದು ಸೇತುವೆಯ ಕೆಲಸದ ಪುನರಾರಂಭಕ್ಕೆ ಸಿದ್ಧತೆ ಮಾಡಿಕೊಂಡಿದ್ದರು ಎಂದು ತಿಳಿದು ಬಂದಿದೆ.
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸೇತುವೆ ಕುಸಿತದ ಬಗ್ಗೆ ತಕ್ಷಣವೇ ಮಾಹಿತಿ ಪಡೆದಿದ್ದು, ಮೃತಪಟ್ಟವರಿಗೆ ತೀವ್ರ ಸಂತಾಪ ಸೂಚಿಸಿದ್ದಾರೆ. ಹಿರಿಯ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ತಲುಪಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ತ್ವರಿತಗೊಳಿಸುವಂತೆ ಸೂಚಿಸಿದ್ದು, ಗಾಯಾಳುಗಳಿಗೆ ಸರಿಯಾದ ಚಿಕಿತ್ಸೆ, ಸಾಕಷ್ಟು ಪರಿಹಾರ ಮತ್ತು ಮೃತರ ಕುಟುಂಬಗಳಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸುವಂತೆ ಅವರು ನಿರ್ದೇಶಿಸಿದ್ದಾರೆ.
ಇದನ್ನೂ ಓದಿ : ಮಳೆಗಾಲಕ್ಕೂ ಮುನ್ನ ಎಚ್ಚೆತ್ತ ಪೊಲೀಸ್ ಇಲಾಖೆ – ಬೀಳುವ ಸ್ಥಿತಿಯಲ್ಲಿರುವ 404 ಮರಗಳ ತೆರವಿಗೆ ಜಿಬಿಎಗೆ ಪತ್ರ!



















