ಬೆಂಗಳೂರು : ಕರ್ನಾಟಕದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ ಬೆನ್ನಲ್ಲೇ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಅತ್ಯಂತ ಭಾವುಕ ಮತ್ತು ಗೌರವಪೂರ್ವಕ ಸಂದೇಶ ಹಂಚಿಕೊಂಡಿದ್ದಾರೆ.
ದೇವರು ವರನೂ ಕೊಡಲ್ಲ, ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ ಮಾಡುತ್ತೇವೆ ಎಂಬುದು ಮುಖ್ಯ. ಇದಕ್ಕೆ ಅತ್ಯುತ್ತಮ ಉದಾಹರಣೆಯೇ ನಮ್ಮ ಸಿದ್ದರಾಮಯ್ಯನವರು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಭಾವುಕ ಸಂದೇಶ ಹಂಚಿಕೊಂಡಿದ್ದಾರೆ.
ಡಿ.ಕೆ ಶಿವಕುಮಾರ್ ಎಕ್ಸ್ ಸಂದೇಶದಲ್ಲೇನಿದೆ?
‘ದೇವರು ವರ ಅಥವಾ ಶಾಪ ನೀಡುವುದಿಲ್ಲ, ಆತ ಕೇವಲ ಅವಕಾಶಗಳನ್ನು ಮಾತ್ರ ನೀಡುತ್ತಾನೆ. ಆ ಸಿಕ್ಕ ಅವಕಾಶದಲ್ಲಿ ನಾವು ಏನನ್ನು ಸಾಧಿಸುತ್ತೇವೆ ಎಂಬುದು ಮುಖ್ಯವಾಗುತ್ತದೆ. ಈ ಆಲೋಚನೆಗೆ ನಮ್ಮ ಸಿದ್ದರಾಮಯ್ಯ ಅವರ ಜೀವನವೇ ಅತ್ಯುತ್ತಮ ಉದಾಹರಣೆ. ಮೈಸೂರು ಜಿಲ್ಲೆಯ ಸಣ್ಣ ಹಳ್ಳಿಯೊಂದರಲ್ಲಿ ಹುಟ್ಟಿ-ಬೆಳೆದು, ಸತತ ಹೋರಾಟಗಳ ಮೂಲಕ ರಾಜಕೀಯ ಪ್ರವೇಶಿಸಿ, ಸಾಮಾಜಿಕ ನ್ಯಾಯದ ಹರಿಕಾರರಾಗಿ ಹಾಗೂ ಬಡವರ ಬಂಧುವಾಗಿ ಕರ್ನಾಟಕದ ಮುಖ್ಯಮಂತ್ರಿಯಾದವರು ನನ್ನ ಆತ್ಮೀಯ ಶ್ರೇಯೋಭಿಲಾಷಿ ಸಿದ್ದರಾಮಯ್ಯನವರು’ ಎಂದು ಡಿಕೆ ಶಿವಕುಮಾರ್ ಉಲ್ಲೇಖಿಸಿದ್ದಾರೆ.
‘ಕರ್ನಾಟಕದ ರಾಜಕೀಯ ಇತಿಹಾಸದಲ್ಲೇ ಅತ್ಯಂತ ಯಶಸ್ವಿ, ಪ್ರಭಾವಶಾಲಿ ಮತ್ತು ಜನರ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿಯುವ ದೀರ್ಘಾವಧಿ ಮುಖ್ಯಮಂತ್ರಿಯಾಗಿ ಅವರು ಮೈಲಿಗಲ್ಲು ಸ್ಥಾಪಿಸಿದ್ದಾರೆ. ಅವರ ಜನಕೇಂದ್ರಿತ ಯೋಜನೆಗಳು ಮತ್ತು ರಾಜ್ಯದ ವಿವಿಧ ವಲಯಗಳ ಅಭಿವೃದ್ಧಿಗೆ ನೀಡಿದ ಕೊಡುಗೆಗಳು ಎಂದಿಗೂ ಮರೆಯಲಾಗದವು. ಸುಮಾರು 50 ವರ್ಷಗಳ ಅವರ ಸುದೀರ್ಘ ರಾಜಕೀಯ ಅನುಭವ ಮತ್ತು ಸಾಮಾಜಿಕ ಕಾಳಜಿ ಸದಾ ಸ್ಮರಣೀಯ. 2020ರಲ್ಲಿ ನಾನು ಕೆಪಿಸಿಸಿ ಅಧ್ಯಕ್ಷನಾಗಿ ಅಧಿಕಾರ ವಹಿಸಿಕೊಂಡ ದಿನದಿಂದ ಇಂದಿನವರೆಗೂ ಸಿದ್ದರಾಮಯ್ಯ ಅವರು ನನ್ನ ಹೆಗಲಿಗೆ ಹೆಗಲು ಕೊಟ್ಟು ಪಕ್ಷ ಸಂಘಟನೆಯಲ್ಲಿ ಭದ್ರ ಸ್ತಂಭದಂತೆ ಜೊತೆಯಾಗಿ ನಿಂತಿದ್ದಾರೆ’ ಎಂದು ಡಿಕೆಶಿ ಬರೆದಿದ್ದಾರೆ.
‘ಸಿದ್ದರಾಮಯ್ಯ ಆಡಳಿತಾವಧಿಯಲ್ಲಿ ಸಚಿವನಾಗಿ ಹಾಗೂ ಉಪಮುಖ್ಯಮಂತ್ರಿಯಾಗಿ ಅವರ ಅನುಭವ, ಬುದ್ಧಿವಂತಿಕೆ ಮತ್ತು ರಾಜಕೀಯ ದೂರದೃಷ್ಟಿಯಿಂದ ನಿರಂತರವಾಗಿ ಕಲಿಯುವ ಸೌಭಾಗ್ಯ ನನ್ನದಾಗಿತ್ತು. ಮುಂಬರುವ ದಿನಗಳಲ್ಲೂ ರಾಜ್ಯದ ಕಲ್ಯಾಣಕ್ಕಾಗಿ ಮತ್ತು ನಮ್ಮ ಪಕ್ಷವನ್ನು ಮತ್ತಷ್ಟು ಬಲಪಡಿಸಲು ಅವರ ಹಿರಿಯ ಅನುಭವದ ಮಾರ್ಗದರ್ಶನ ಮತ್ತು ಬೆಂಬಲ ನಮಗೆ ಹೀಗೆಯೇ ಮುಂದುವರಿಯುತ್ತದೆ ಎಂದು ನಾನು ಪ್ರಾಮಾಣಿಕವಾಗಿ ಆಶಿಸುತ್ತೇನೆ. ವೇಗವಾಗಿ ನಡೆಯಬೇಕಾದರೆ ಒಬ್ಬನೇ ನಡೆಯಬೇಕು, ಸುದೀರ್ಘ ದೂರ ಸಾಗಬೇಕಾದರೆ ಜೊತೆಯಾಗಿ ನಡೆಯಬೇಕು ಎಂಬ ನಾಣ್ಣುಡಿಯಂತೆ, ಕರ್ನಾಟಕದ ಜನರ ಸೇವೆಗಾಗಿ ಮತ್ತು ರಾಜ್ಯದ ಪ್ರಗತಿಗಾಗಿ ನಾವೆಲ್ಲರೂ ಒಟ್ಟಾಗಿ ಮುನ್ನಡೆಯೋಣ ಎಂದು ಡಿಕೆ ಶಿವಕುಮಾರ್ ತಮ್ಮ ಎಕ್ಸ್ ಸಂದೇಶದಲ್ಲಿ ಬರೆದುಕೊಂಡಿದ್ದಾರೆ.
ಇದನ್ನೂ ಓದಿ : ದಿಲ್ಲಿಯಲ್ಲಿ ಸಿದ್ದರಾಮಯ್ಯ, ಡಿಕೆಶಿ : ವರಿಷ್ಠರ ಜೊತೆ ಹೊಸ ಸರ್ಕಾರ, ಸಂಪುಟ ರಚನೆಯ ಚರ್ಚೆ!



















