ಬೆಳಗಾವಿ : ಜಿಲ್ಲೆಯ ಮೂಡಲಗಿ ತಾಲೂಕಿನ ಸಂಗನಕೇರಿ ಗ್ರಾಮದಲ್ಲಿರುವ ಫರ್ನಿಚರ್ ಅಂಗಡಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 6 ಕೋಟಿ ರೂ. ಮೌಲ್ಯದ ಆಸ್ತಿ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ.
ಸಂಗನಕೇರಿ ಗ್ರಾಮದ ಎಸ್‌ಎಂಕೆ ಫರ್ನಿಚರ್ ಅಂಗಡಿಯಲ್ಲಿ ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಈ ಫರ್ನಿಚರ್ ಅಂಗಡಿ ಶಿವಲಿಂಗ ಪಾಟೀಲ ಅವರಿಗೆ ಸೇರಿದ್ದು, ಬೆಂಕಿ ಕ್ಷಣಾರ್ಧದಲ್ಲಿ ಅಂಗಡಿಯೊಳಗಿನ ಪೀಠೋಪಕರಣಗಳಿಗೆ ವ್ಯಾಪಿಸಿ ಭಾರೀ ಪ್ರಮಾಣದ ಹಾನಿ ಉಂಟುಮಾಡಿದೆ. ಅಂಗಡಿಯ ಪಕ್ಕದಲ್ಲೇ ಪೆಟ್ರೋಲ್ ಬಂಕ್ ಇದ್ದ ಕಾರಣ ಪರಿಸ್ಥಿತಿ ಮತ್ತಷ್ಟು ಆತಂಕಕಾರಿ ಆಗಿತ್ತು. ಆದರೆ ಅಗ್ನಿಶಾಮಕ ಸಿಬ್ಬಂದಿ ಸಮಯಕ್ಕೆ ಸರಿಯಾಗಿ ಕಾರ್ಯಾಚರಣೆ ನಡೆಸಿದ ಪರಿಣಾಮ ಸಂಭವಿಸಬಹುದಾಗಿದ್ದ ಭಾರೀ ಅನಾಹುತ ತಪ್ಪಿದೆ.
ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಹಲವು ಗಂಟೆಗಳ ಕಾರ್ಯಾಚರಣೆಯ ಬಳಿಕ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು.
ಅವಘಡದಿಂದ ಅಂಗಡಿಯಲ್ಲಿದ್ದ ಫರ್ನಿಚರ್ ಸಾಮಗ್ರಿಗಳು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಕೋಟ್ಯಂತರ ರೂಪಾಯಿ ನಷ್ಟ ಸಂಭವಿಸಿದೆ. ಘಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಘಟಪ್ರಭಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ಏನು ಎಂಬುದರ ಕುರಿತು ತನಿಖೆ ಮುಂದುವರಿದಿದೆ.


















