ಬೆಂಗಳೂರು : ನಗರದ ಕೆಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪುಡಿರೌಡಿಗಳು ಮಾರಕಾಸ್ತ್ರ ಹಿಡಿದು ಪುಂಡಾಟ ಮೆರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೇ 30ರಂದು ಕೆಜೆ ಹಳ್ಳಿಯ ಪಿಳ್ಳಣ್ಣ ಗಾರ್ಡನ್ ಬಳಿ ಈ ಘಟನೆ ನಡೆದಿದ್ದು, ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿತ್ತು.
ಕಿಡಿಗೇಡಿಗಳು ಮಾರಕಾಸ್ತ್ರಗಳನ್ನು ಹಿಡಿದು ರಸ್ತೆಯಲ್ಲಿ ಪುಂಡಾಟ ನಡೆಸಿದ್ದ ದೃಶ್ಯಗಳು ಸ್ಥಳೀಯರ ಮೊಬೈಲ್‌ಗಳಲ್ಲಿ ಸೆರೆಯಾಗಿದ್ದವು. ಬಳಿಕ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪ್ರಕರಣದ ಗಂಭೀರತೆಯನ್ನು ಗಮನಿಸಿದ ಕೆಜೆ ಹಳ್ಳಿ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.
ಸಿಸಿಟಿವಿ ದೃಶ್ಯಗಳು ಹಾಗೂ ವಿಡಿಯೋದಲ್ಲಿದ್ದ ಬೈಕ್‌ಗಳ ನೋಂದಣಿ ಸಂಖ್ಯೆಗಳ ಆಧಾರದ ಮೇಲೆ ಆರೋಪಿಗಳನ್ನು ಪತ್ತೆ ಹಚ್ಚಿದ ಪೊಲೀಸರು, ಮೂವರನ್ನೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಪ್ರಕರಣಕ್ಕೆ ಸಂಬಂಧಿಸಿದ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ. ಆರೋಪಿಗಳ ವಿರುದ್ಧ ಆರ್ಮ್ಸ್ ಆ್ಯಕ್ಟ್ ಸೇರಿದಂತೆ ವಿವಿಧ ಕಲಂಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರಿದಿದೆ.
ಇದನ್ನೂ ಓದಿ : ರಾಜ್ಯಾದ್ಯಂತ ಜೂನ್ 5ರವರೆಗೆ ಭಾರೀ ಮಳೆ : ಗುಡುಗು, ಮಿಂಚು ಸಹಿತ ಬಿರುಗಾಳಿ ಎಚ್ಚರಿಕೆ!



















