ವಿಜಯಪುರ : ಶಾಲಾ-ಕಾಲೇಜುಗಳಲ್ಲಿ ಕೇಸರಿ ಶಾಲು ಹಾಗೂ ಹಿಜಾಬ್ ವಿಚಾರ ಮತ್ತೆ ಚರ್ಚೆಗೆ ಗ್ರಾಸವಾಗಿದ್ದು, ವಿದ್ಯಾರ್ಥಿಗಳಿಗೆ ಕೇಸರಿ ಶಾಲು ವಿತರಿಸಲು ಮುಂದಾದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಅವರ ಬೆಂಬಲಿಗರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ವಿಜಯಪುರದಲ್ಲಿ ನಡೆದಿದೆ.
ನಗರದ ದರ್ಬಾರ್ ಕಾಲೇಜು ಹಾಗೂ ದರ್ಬಾರ್ ಹೈಸ್ಕೂಲ್ ಸಮೀಪ ವಿದ್ಯಾರ್ಥಿಗಳಿಗೆ ಕೇಸರಿ ಶಾಲು ವಿತರಿಸಲು ಯತ್ನಾಳ್ ಮುಂದಾಗಿದ್ದರು. ಈ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಯತ್ನಾಳ್ ಬೆಂಬಲಿಗರು ದೊಡ್ಡ ಸಂಖ್ಯೆಯಲ್ಲಿ ಜಮಾಯಿಸಿದ್ದು, ವಿದ್ಯಾರ್ಥಿಗಳಿಗೆ ಕೇಸರಿ ಶಾಲು ನೀಡಲು ಪ್ರಯತ್ನಿಸಿದ್ದಾರೆ. ಆದರೆ ಪರಿಸ್ಥಿತಿ ಉದ್ವಿಗ್ನಗೊಳ್ಳುವ ಸಾಧ್ಯತೆ ಹಿನ್ನೆಲೆ ಪೊಲೀಸರು ಮಧ್ಯಪ್ರವೇಶಿಸಿ ತಡೆಹಿಡಿದಿದ್ದಾರೆ. ಈ ವೇಳೆ ಬೆಂಬಲಿಗರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆದಿದ್ದು, ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು.
ಬಳಿಕ ಸ್ಥಳಕ್ಕೆ ಆಗಮಿಸಿದ ಶಾಸಕ ಯತ್ನಾಳ್ ಅವರು ವಿದ್ಯಾರ್ಥಿಗಳಿಗೆ ಕೇಸರಿ ಶಾಲು ವಿತರಿಸಲು ಮುಂದಾಗುತ್ತಿದ್ದಂತೆ, ಪೊಲೀಸರು ಅವರನ್ನು ಹಾಗೂ ಅವರ ಬೆಂಬಲಿಗರನ್ನು ವಶಕ್ಕೆ ಪಡೆದರು. ವಶಕ್ಕೆ ಪಡೆಯುತ್ತಿದ್ದಂತೆಯೇ ಯತ್ನಾಳ್ ಹಾಗೂ ಬೆಂಬಲಿಗರು ಪೊಲೀಸ್ ಇಲಾಖೆಯ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪರಿಸ್ಥಿತಿ ನಿಯಂತ್ರಣದಲ್ಲಿಡಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲೇ ಹಾಜರಿದ್ದು ಭದ್ರತೆ ಕಾಪಾಡುತ್ತಿದ್ದಾರೆ.



















