ಬಳ್ಳಾರಿ : ಬಳ್ಳಾರಿ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಜಾಜರಕಲ್ ಟೋಲ್ ಪ್ಲಾಜಾ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಲಾರಿ ಚಾಲಕನೊಬ್ಬ ಸಜೀವ ದಹನಗೊಂಡಿರುವ ದುರ್ಘಟನೆ ನಡೆದಿದೆ.
ಜಿಲ್ಲೆಯ ಗಡಿ ಭಾಗವಾದ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಹಿರೇಹಾಳ್ ಸಮೀಪದ ಜಾಜರಕಲ್ ಟೋಲ್ ಪ್ಲಾಜಾ ಬಳಿ ಈ ಅಪಘಾತ ಸಂಭವಿಸಿದೆ. ಬಳ್ಳಾರಿ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 150/ಎ ಯಲ್ಲಿ ಟೋಲ್ ಪ್ಲಾಜಾ ದಾಟಿದ ಬಳಿಕ ಪಂಕ್ಚರ್ ಆಗಿದ್ದ ಸಿಮೆಂಟ್ ಟ್ಯಾಂಕರ್‌ವೊಂದು ರಸ್ತೆ ಬದಿಯಲ್ಲಿ ನಿಂತಿತ್ತು. ಈ ವೇಳೆ ರಾಂಪುರ ಕಡೆಯಿಂದ ವೇಗವಾಗಿ ಬಂದ ಮತ್ತೊಂದು ಲಾರಿ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಎರಡೂ ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದ್ದು, ಕ್ಷಣಾರ್ಧದಲ್ಲೇ ಜ್ವಾಲೆಗಳು ವ್ಯಾಪಿಸಿವೆ. ಅಪಘಾತದ ವೇಳೆ ಲಾರಿಯ ಕ್ಯಾಬಿನ್‌ನಲ್ಲಿ ಸಿಲುಕಿಕೊಂಡಿದ್ದ ಚಾಲಕ ದೀಕ್ಷಿತ್ ಹೊರಬರಲು ಸಾಧ್ಯವಾಗದೇ ಸಜೀವ ದಹನಗೊಂಡು ಮೃತಪಟ್ಟಿದ್ದಾನೆ. ಬೆಂಕಿಯ ತೀವ್ರತೆಗೆ ವಾಹನಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಆಂಧ್ರಪ್ರದೇಶ ಹಾಗೂ ಕರ್ನಾಟಕ ರಾಜ್ಯಗಳ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಹಲವು ಗಂಟೆಗಳ ಪ್ರಯತ್ನದ ಬಳಿಕ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು.
ಅಪಘಾತದ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಸಂಚಾರ ದಟ್ಟಣೆ ಉಂಟಾಗಿತ್ತು. ಬಳಿಕ ಪೊಲೀಸರು ಹಾಗೂ ಸಂಬಂಧಿತ ಅಧಿಕಾರಿಗಳು ವಾಹನಗಳನ್ನು ತೆರವುಗೊಳಿಸಿ ಸಂಚಾರ ಸುಗಮಗೊಳಿಸಿದರು. ಘಟನಾ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪಘಾತದ ನಿಖರ ಕಾರಣವನ್ನು ಪತ್ತೆಹಚ್ಚಲು ತನಿಖೆ ಆರಂಭಿಸಿದ್ದಾರೆ.
ಇದನ್ನೂ ಓದಿ : ಗುತ್ತಿಗೆದಾರನ ಮನೆಯಲ್ಲಿ 25 ಲಕ್ಷ ಕಳ್ಳತನ ; ನೇಪಾಳಿ ದಂಪತಿ ಬಂಧನ



















