ಬೆಂಗಳೂರು : ನಗರದ ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯ ಹೆಬ್ಬಗೋಡಿ ಠಾಣೆ ಪೊಲೀಸರು ಬೆಳ್ಳಂಬೆಳಗ್ಗೆ ನಡೆಸಿದ ಕಾರ್ಯಾಚರಣೆಯಲ್ಲಿ ರೌಡಿಶೀಟರ್ ಜೀವ (19) ಎಂಬಾತನ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.
ಹೆಬ್ಬಗೋಡಿಯ ತಿರುಪಾಳ್ಯ ನಿವಾಸಿಯಾಗಿರುವ ಜೀವ ವಿರುದ್ಧ ಕೊಲೆ, ಸುಲಿಗೆ, ದರೋಡೆ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿದ್ದು, ಕಳೆದ ವಾರ ಹೆಬ್ಬಗೋಡಿ ಹಾಗೂ ಎಲೆಕ್ಟ್ರಾನಿಕ್ ಸಿಟಿ ಭಾಗಗಳಲ್ಲಿ ನಡೆದ ದರೋಡೆ ಪ್ರಕರಣದಲ್ಲೂ ಈತ ಪ್ರಮುಖ ಆರೋಪಿಯಾಗಿದ್ದ.
ಆರೋಪಿಗಾಗಿ ಹಲವು ದಿನಗಳಿಂದ ಹುಡುಕಾಟ ನಡೆಸುತ್ತಿದ್ದ ಪೊಲೀಸರಿಗೆ, ಆತ ಸಿಂಗೇನಾ ಅಗ್ರಹಾರದ ತೋಪಿನಲ್ಲಿ ಅಡಗಿ ಕುಳಿತಿರುವ ಬಗ್ಗೆ ಮಾಹಿತಿ ಸಿಕ್ಕಿತ್ತು. ಮಾಹಿತಿ ಆಧರಿಸಿ ಇನ್ಸ್‌ಪೆಕ್ಟರ್ ಸೋಮಶೇಖರ್ ನೇತೃತ್ವದ ಹೆಬ್ಬಗೋಡಿ ಪೊಲೀಸರು ಬೆಳಗಿನ ಜಾವ ದಾಳಿ ನಡೆಸಿದ್ದಾರೆ.
ಪೊಲೀಸರು ಆರೋಪಿ ಜೀವನನ್ನು ಹಿಡಿಯಲು ಮುಂದಾದಾಗ ಆತ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ಪೊಲೀಸ್ ಸಿಬ್ಬಂದಿ ನಾಗೇಶ್ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದಲ್ಲದೆ, ತನ್ನ ಬಳಿ ಇದ್ದ ಮಾರಕಾಸ್ತ್ರದಿಂದ ದಾಳಿ ನಡೆಸಲು ಯತ್ನಿಸಿದ್ದಾನೆ. ಇದರಿಂದ ಪರಿಸ್ಥಿತಿ ಗಂಭೀರವಾಗಿದ್ದು, ಪೊಲೀಸರು ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ್ದಾರೆ.
ಸಬ್ ಇನ್ಸ್‌ಪೆಕ್ಟರ್ ಅಯ್ಯಪ್ಪ ಹಾರಿಸಿದ ಗುಂಡು ಜೀವನ ಕಾಲಿಗೆ ತಗುಲಿದೆ. ಗಾಯಗೊಂಡ ಆತನನ್ನು ಪೊಲೀಸರು ಕೂಡಲೇ ಬಂಧಿಸಿದ್ದಾರೆ. ಬಳಿಕ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೆಬ್ಬಗೋಡಿ ಹಾಗೂ ಎಲೆಕ್ಟ್ರಾನಿಕ್ ಸಿಟಿ ಭಾಗದಲ್ಲಿ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಜೀವನ ಬಂಧನದಿಂದ ಪೊಲೀಸರಿಗೆ ಮಹತ್ವದ ಯಶಸ್ಸು ಸಿಕ್ಕಿದ್ದು, ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ಮುಂದುವರಿದಿದೆ.
ಇದನ್ನೂ ಓದಿ : ಚಾರ್ಮಾಡಿಯಲ್ಲಿ ಚಿರತೆ ಪ್ರತ್ಯಕ್ಷ ; ಪ್ರಯಾಣಿಕರಿಗೆ ಅರಣ್ಯ ಇಲಾಖೆ ಎಚ್ಚರಿಕೆ!



















