ಚಾಮರಾಜನಗರ : ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಮುಡಿಗುಂಡ ಸೇತುವೆ ಬಳಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ನಡೆದಿದೆ. ವೇಗವಾಗಿ ಸಾಗುತ್ತಿದ್ದ ಕಾರು ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ಅಪಘಾತದಲ್ಲಿ ಮೃತಪಟ್ಟವರನ್ನು ಕೊಳ್ಳೇಗಾಲ ಜೆಎಂಎಫ್‌ಸಿ ನ್ಯಾಯಾಲಯದ ಶಿರೆಸ್ತೆದಾರ್ ನಂಜುಂಡಪ್ಪ ಹಾಗೂ ಡಿ ಗ್ರೂಪ್ ನೌಕರ ಯಮುನಪ್ಪ ಎಂದು ಗುರುತಿಸಲಾಗಿದೆ. ಇಬ್ಬರೂ ನ್ಯಾಯಾಂಗ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದು, ಅವರ ಅಕಾಲಿಕ ನಿಧನದಿಂದ ನ್ಯಾಯಾಲಯ ಸಿಬ್ಬಂದಿ ವಲಯದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.
ಅದೇ ಕಾರಿನಲ್ಲಿದ್ದ ಲೊಕೇಶ್, ಶಂಕರಪ್ಪ ಹಾಗೂ ಮತ್ತೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಸ್ಥಳೀಯರು ಹಾಗೂ ಪೊಲೀಸರು ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸಿದ್ದಾರೆ.
ಮಾಹಿತಿಯ ಪ್ರಕಾರ, ಖಾಸಗಿ ಕಾರ್ಯಕ್ರಮದ ನಿಮಿತ್ತ ಮೈಸೂರಿಗೆ ತೆರಳಿದ್ದ ಈ ತಂಡವು ಕಾರ್ಯಕ್ರಮ ಮುಗಿಸಿ ಕೊಳ್ಳೇಗಾಲಕ್ಕೆ ವಾಪಸ್ ಆಗುತ್ತಿದ್ದ ವೇಳೆ ಮುಡಿಗುಂಡ ಸೇತುವೆ ಬಳಿ ಅಪಘಾತಕ್ಕೀಡಾಗಿದೆ.
ಗಾಯಗೊಂಡಿರುವ ಲೊಕೇಶ್, ಶಂಕರಪ್ಪ ಹಾಗೂ ಮತ್ತೋರ್ವರನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಸ್ಥಿತಿಯ ಕುರಿತು ವೈದ್ಯರು ನಿಗಾ ವಹಿಸಿದ್ದು, ಹೆಚ್ಚಿನ ಚಿಕಿತ್ಸೆ ಮುಂದುವರಿದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿಸಿದ್ದಾರೆ.
ಇದನ್ನೂ ಓದಿ : ಮೂರೇ ತಿಂಗಳಲ್ಲಿ ಎಂಟು ಸಾವು : ಛತ್ತೀಸ್‌ಗಢದ ಹಳ್ಳಿಯಲ್ಲಿ ಮಂತ್ರ-ತಂತ್ರ, ವಿಷಪ್ರಾಷನದ ಭೀತಿ!



















