ಕೋಲಾರ : ಕೋಲಾರ ಜಿಲ್ಲೆಯಲ್ಲಿ ಮಾವು ಬೆಳೆಗಾರರು ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾವಿಗೆ ಬೆಂಬಲ ಬೆಲೆ ಘೋಷಣೆ ಮಾಡುವಂತೆ ಒತ್ತಾಯಿಸಿ ಬಂದ್ ಕರೆ ನೀಡಿದ ಹಿನ್ನೆಲೆಯಲ್ಲಿ, ಶ್ರೀನಿವಾಸಪುರ ಪಟ್ಟಣದಲ್ಲಿ ರೈತರು ಪ್ರತಿಭಟನೆ ನಡೆಸಿದರು.
ಶ್ರೀನಿವಾಸಪುರ ಬಸ್ ನಿಲ್ದಾಣದ ಬಳಿ ಮಾವು ಬೆಳೆಗಾರರ ಸಂಘದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ, ರೈತರು ಎರಡು ಟ್ರ್ಯಾಕ್ಟರ್‌ಗಳಲ್ಲಿ ಮಾವುಗಳನ್ನು ರಸ್ತೆಗೆ ಚೆಲ್ಲಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ಅಲ್ಲದೆ, ರಸ್ತೆ ಮಧ್ಯೆ ಟೈರ್‌ಗಳಿಗೆ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಪ್ರತಿಭಟನಾಕಾರರು ರಸ್ತೆ ಮಧ್ಯೆ ಟ್ರ್ಯಾಕ್ಟರ್‌ಗಳನ್ನು ನಿಲ್ಲಿಸಿ ಸಂಚಾರವನ್ನು ಸಂಪೂರ್ಣವಾಗಿ ಬಂದ್ ಮಾಡಿದರು. ಇದರಿಂದ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ಮಾವು ಬೆಳೆಗೆ ಪ್ರತಿ ಟನ್‌ಗೆ 10,000 ರೂ. ಬೆಂಬಲ ಬೆಲೆ ನಿಗದಿ ಮಾಡಬೇಕು ಎಂದು ರೈತರು ಆಗ್ರಹಿಸಿದ್ದಾರೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಹೋರಾಟಗಾರರು ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಿಸಲು ಮುಂದಾದರು.
ಇದನ್ನೂ ಓದಿ : ಕಬಿನಿ ಒಡಲು ಸೇರುತ್ತಿದೆ ರೆಸಾರ್ಟ್, ಹೋಂಸ್ಟೇ ತ್ಯಾಜ್ಯ!



















