ಬೀದರ್ : ಪಕ್ಕದ್ಮನೆ ಹುಡುಗಿ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದನ್ನು ಪ್ರಶ್ನಿಸಿದ್ದಕ್ಕೆ ಪತಿ ರಾಡ್‌ನಿಂದ ಹೊಡೆದು ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಹತ್ಯೆಗೈದಿರುವ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಗಾಯಮುಖ ದೇವಸ್ಥಾನದ ಬಳಿಯ ಅರಣ್ಯ ಪ್ರದೇಶದಲ್ಲಿ ನಡೆದಿದೆ.
ಬೀದರ್ ತಾಲೂಕಿನ ಹೊನ್ನಿಕೇರಿ ಗ್ರಾಮದ ಸಂಜನಾ (26) ಕೊಲೆಯಾದ ದುರ್ದೈವಿ ಪತ್ನಿ. ಆರೋಪಿ ಪತಿ ಭಗವತ್ ಜ್ಞಾನೇಶ್ವರ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.
ಸಂಜನಾ ಹಾಗೂ ಭಗವತ್ 2 ವರ್ಷದ ಹಿಂದೆ ಮದುವೆಯಾಗಿದ್ದರು. ಪತಿ ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಬೀದರ್‌ನ ಶಿವನಗರದಲ್ಲಿ ವಾಸವಾಗಿದ್ದರು. ಈ ವೇಳೆ ಪತಿ ಪಕ್ಕದ ಮನೆಯ ಹುಡುಗಿ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ ಎನ್ನಲಾಗಿದೆ. ಇದನ್ನು ಪ್ರಶ್ನಿಸಿದ್ದಕ್ಕೆ ಪತ್ನಿಯ ಜೊತೆ ಗಲಾಟೆ ಮಾಡಿ, ಹೊನ್ನಿಕೇರಿ ಅರಣ್ಯಕ್ಕೆ ಕಾರಿನಲ್ಲಿ ಕರೆದುಕೊಂಡು ಹೋಗಿದ್ದಾನೆ. ಅಲ್ಲಿ ಕಬ್ಬಿಣದ ರಾಡ್‌ನಿಂದ ತಲೆ, ಕತ್ತಿಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ.
ಭೀಕರವಾಗಿ ಗಾಯಗೊಂಡಿದ್ದ ಪತ್ನಿಯನ್ನು ಮಹಾರಾಷ್ಟ್ರದ ಸೊಲ್ಲಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ. ಬ್ರಿಮ್ಸ್ ಶವಾಗಾರದ ಬಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಈ ಸಂಬಂಧ ಧನ್ನೂರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಚಾಮರಾಜಪೇಟೆಯಲ್ಲಿ SIR ಆರಂಭಕ್ಕೂ ಮುನ್ನವೇ ಕಾಂಗ್ರೆಸ್-ಬಿಜೆಪಿ ಜಟಾಪಟಿ!



















