ಮಂಗಳೂರು : ನಗರದ ಕಂಕನಾಡಿ ಸಮೀಪ ಭಾರೀ ಮಳೆಯ ನಡುವೆ ತಡೆಗೋಡೆ ಕುಸಿದು ಮನೆ ಮೇಲೆ ಬಿದ್ದ ಪರಿಣಾಮ ಭೀಕರ ದುರಂತ ಸಂಭವಿಸಿದೆ. ದುರ್ಘಟನೆಯಲ್ಲಿ ಮಹಿಳೆಯೊಬ್ಬರು ಹಾಗೂ ಇಬ್ಬರು ಹೆಣ್ಮಕ್ಕಳು ಸೇರಿ ಮೂವರು ಮೃತಪಟ್ಟಿದ್ದಾರೆ.
ಭಾರೀ ಗಾಳಿ-ಮಳೆಯಿಂದ ತಡೆಗೋಡೆ ಕುಸಿದು ಅದರ ಅವಶೇಷಗಳು ಮನೆಯ ಮೇಲ್ಛಾವಣಿಗೆ ಬಿದ್ದ ಪರಿಣಾಮ ಈ ಅವಘಡ ಸಂಭವಿಸಿದೆ. ಶಾಂತ (46), ಅನಾಮಿಕ ಚೌರಾಸಿಯಾ (8) ಹಾಗೂ ಪರಿ (4) ಮೃತಪಟ್ಟವರು ಎಂದು ತಿಳಿದುಬಂದಿದೆ.
ಘಟನೆಯಲ್ಲಿ ಅಲ್ಕಾ (14), ಅನುಷಾ (11) ಹಾಗೂ ಬಾಲಕೃಷ್ಣ (48) ಅವರನ್ನು ಅಗ್ನಿಶಾಮಕ ಮತ್ತು ತುರ್ತು ಸೇವಾ ದಳದ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಹೊರತೆಗೆಯಲಾಗಿದೆ.
ಮೃತರು ಹಾಗೂ ಬದುಕುಳಿದವರು ಮೂಲತಃ ಬಿಹಾರ ರಾಜ್ಯದವರಾಗಿದ್ದು, ಕಳೆದ 20 ವರ್ಷಗಳಿಂದ ಮಂಗಳೂರಿನ ಕಂಕನಾಡಿ ಪ್ರದೇಶದಲ್ಲಿ ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ.
ಘಟನೆಯ ಬಗ್ಗೆ ಸಚಿವ ಯು.ಟಿ. ಖಾದರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ದೆಹಲಿಯಲ್ಲಿದ್ದ ಅವರು ಘಟನೆ ತಿಳಿಯುತ್ತಿದ್ದಂತೆಯೇ ಮಂಗಳೂರಿಗೆ ಆಗಮಿಸಲು ಸಿದ್ಧತೆ ನಡೆಸಿದ್ದು, ಜಿಲ್ಲಾಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿ ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುವಂತೆ ಹಾಗೂ ಮೃತರ ಕುಟುಂಬಕ್ಕೆ ಇಂದೇ ಪರಿಹಾರಧನ ಬಿಡುಗಡೆ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಇದನ್ನೂ ಓದಿ : ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ – ಓರ್ವ ಸಾವು, 10ಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರ ಗಾಯ!



















