ಬೆಂಗಳೂರು : ಕಬ್ಬಿಣದ ರಾಡ್‌ಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಬ್ರೇಕ್ ಫೇಲ್ ಆಗಿ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು, ಬಳಿಕ ರಸ್ತೆ ಬದಿಯ ಅಂಗಡಿ ಹಾಗೂ ಆಟೋಗೆ ಗುದ್ದಿದ ಘಟನೆ ಮಧ್ಯರಾತ್ರಿ ಸ್ಯಾಟಲೈಟ್ ಬಸ್ ನಿಲ್ದಾಣದ ಬಳಿ ನಡೆದಿದೆ.
ಕೆ.ಆರ್.ಪುರಂನಿಂದ ಕೆಂಗೇರಿಯತ್ತ ಕಬ್ಬಿಣದ ರಾಡ್‌ಗಳನ್ನು ಸಾಗಿಸುತ್ತಿದ್ದ ಲಾರಿ, ಸ್ಯಾಟಲೈಟ್ ಬಸ್ ನಿಲ್ದಾಣದ ಸಮೀಪ ಬರುತ್ತಿದ್ದಂತೆ ಏಕಾಏಕಿ ಬ್ರೇಕ್ ಫೇಲಾಗಿದ್ದು, ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮ ಲಾರಿ ಮೊದಲು ಡಿವೈಡರ್‌ಗೆ ಡಿಕ್ಕಿ ಹೊಡೆದು, ಬಳಿಕ ರಸ್ತೆ ಬದಿಯಲ್ಲಿದ್ದ ಅಂಗಡಿ ಹಾಗೂ ಅಲ್ಲೇ ನಿಂತಿದ್ದ ಆಟೋಗೆ ಗುದ್ದಿದೆ.
ಅವಘಡದಲ್ಲಿ ಆಟೋ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳದಲ್ಲೇ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಬ್ಯಾಟರಾಯನಪುರ ಸಂಚಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಲಾರಿ ತೆರವು ಕಾರ್ಯಾಚರಣೆ ನಡೆಸಿದ್ದು, ಕೆಲಕಾಲ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅವಘಡದ ಕುರಿತು ತನಿಖೆ ಮುಂದುವರಿಸಿದ್ದಾರೆ.
ಇದನ್ನೂ ಓದಿ : ಸರ್ಕಾರಿ ಶಾಲೆಯಲ್ಲಿ ಗ್ಯಾಸ್ ಸೋರಿಕೆ – ಕ್ಷಣಾರ್ಧದಲ್ಲಿ ಬೆಂಕಿಗಾಹುತಿಯಾದ ಅಡುಗೆ ಕೋಣೆ!



















