ರಾಮನಗರ : ಬೆಂಗಳೂರು ದಕ್ಷಿಣ ಜಿಲ್ಲೆಯ ತಾವರೆಕೆರೆಯ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು ಏಳು ಕಾರ್ಮಿಕರು ಮೃತಪಟ್ಟಿರುವ ದುರಂತದ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಘಟನೆ ತಮಗೆ ಅತೀವ ನೋವುಂಟು ಮಾಡಿದೆ ಎಂದು ಅವರು ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ Xನಲ್ಲಿ ಟ್ವೀಟ್ ಮಾಡಿರುವ ಅವರು, ಮೃತ ಕಾರ್ಮಿಕರ ಆತ್ಮಕ್ಕೆ ಚಿರಶಾಂತಿ ಕೋರಿ, ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಬರೆದುಕೊಂಡಿದ್ದಾರೆ. ಜೊತೆಗೆ ರಾಜ್ಯ ಸರ್ಕಾರ ಮೃತರ ಕುಟುಂಬಗಳಿಗೆ ತಕ್ಷಣವೇ ಸೂಕ್ತ ಪರಿಹಾರ ನೀಡುವುದರ ಜೊತೆಗೆ ಅಗತ್ಯವಿರುವ ಎಲ್ಲ ತುರ್ತು ನೆರವು ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.
ಇದರ ಜೊತೆಗೆ, ರಾಜ್ಯದ ಎಲ್ಲಾ ಕ್ವಾರಿಗಳಲ್ಲಿ ಕಟ್ಟುನಿಟ್ಟಿನ ಸುರಕ್ಷತಾ ನಿಯಮಗಳನ್ನು ಜಾರಿಗೊಳಿಸಿ, ಸಂಬಂಧಿತ ಇಲಾಖೆಗಳು ನಿರಂತರ ನಿಗಾ ವಹಿಸುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಸುರಕ್ಷತಾ ನಿಯಮಗಳ ಕಟ್ಟುನಿಟ್ಟಿನ ಅನುಷ್ಠಾನವಾಗದ ಕಾರಣವೇ ಇಂತಹ ದುರಂತಗಳು ಮರುಕಳಿಸುತ್ತಿವೆ. ರಾಜ್ಯದಲ್ಲಿ ಪದೇಪದೇ ಕ್ವಾರಿ ದುರಂತಗಳು ಸಂಭವಿಸುತ್ತಿದ್ದರೂ ಯಾರ ಮೇಲೆಯೂ ಸೂಕ್ತ ಕ್ರಮ ಕೈಗೊಳ್ಳದಿರುವುದು ಅತ್ಯಂತ ಬೇಸರದ ಸಂಗತಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಕ್ವಾರಿ ಮಾಲೀಕರೂ ಕೂಡ ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ವಹಿಸಿ, ಕಾರ್ಮಿಕರ ಸುರಕ್ಷತೆಗೆ ಅಗತ್ಯ ಕ್ರಮಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದ್ದಾರೆ. ಈ ಕುರಿತು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಸಾಮಾಜಿಕ ಜಾಲತಾಣ Xನಲ್ಲಿ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ : ತಾವರೆಕೆರೆಯಲ್ಲಿ ಘನಘೋರ ದುರಂತ : ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರು ಸಾವು!



















