ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನ ಆರ್.ಟಿ. ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರು ಮನೆಯಲ್ಲಿ ಮೃತಪಟ್ಟಿದ್ದು, ಎರಡು ರಿಂದ ಮೂರು ದಿನಗಳ ಬಳಿಕ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಭಾಸ್ಕರ್ ದೇವಾಡಿಗ ಎಂದು ಗುರುತಿಸಲಾಗಿದೆ.
ಮೂಲತಃ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಸಾಲಿಗ್ರಾಮದ ನಿವಾಸಿಯಾಗಿದ್ದ ಭಾಸ್ಕರ್ ದೇವಾಡಿಗ ಅವರು ಬಾರ್ ಕೌನ್ಸಿಲ್‌ನಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು. ಪ್ರಾಥಮಿಕ ಮಾಹಿತಿಯ ಪ್ರಕಾರ, ಅವರು ಎರಡು ರಿಂದ ಮೂರು ದಿನಗಳ ಹಿಂದೆಯೇ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಸುಮಾರು 10 ವರ್ಷಗಳ ಹಿಂದೆ ಭಾಸ್ಕರ್ ಅವರ ಪತ್ನಿ ನಿಧನರಾಗಿದ್ದರು. ಅವರ ಮಗಳು ತವರು ಮನೆಗೆ ತೆರಳಿದ್ದರಿಂದ ಭಾಸ್ಕರ್ ಮನೆಯಲ್ಲಿ ಒಬ್ಬರೇ ವಾಸವಾಗಿದ್ದರು. ಇದೇ ವೇಳೆ ಅವರು ಮಲಗಿದ್ದ ಸ್ಥಳದಲ್ಲೇ ಮೃತಪಟ್ಟಿದ್ದು, ಹಲವು ದಿನಗಳ ನಂತರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಈ ಸಂಬಂಧ ಭಾಸ್ಕರ್ ದೇವಾಡಿಗ ಅವರ ತಂಗಿ ಆರ್.ಟಿ. ನಗರ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಆರ್.ಟಿ. ನಗರ ಪೊಲೀಸರು ಸಾವಿನ ನಿಖರ ಕಾರಣ ತಿಳಿಯಲು ತನಿಖೆ ಮುಂದುವರಿಸಿದ್ದು, ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದಾರೆ.
ಇದನ್ನೂ ಓದಿ : 200 ಎಕರೆ ಸರ್ಕಾರಿ ಜಮೀನಿಗೆ ನಕಲಿ ದಾಖಲೆ ಸೃಷ್ಟಿ – ಭೂಮಾಪನ ಇಲಾಖೆಯ 9 ಮಂದಿ ಬಂಧನ!


















