ಉತ್ತರ ಕನ್ನಡ : ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಾಟ್‌ನ ಬಳಗಾರ್ ಬಳಿ ಇಂದು (ಜು.9) ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕ್ರೂಸರ್ ವಾಹನ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಆರು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಅಪಘಾತಕ್ಕೊಳಗಾದ ತೂಫಾನ್ ಕ್ರೂಸರ್ ವಾಹನದಲ್ಲಿದ್ದ (KA 19 AA 5920) ಚಾಲಕ ಸೇರಿ ಒಟ್ಟು 9 ಜನರು ಧಾರವಾಡ ಮೂಲದವರಾಗಿದ್ದಾರೆ ಎನ್ನಲಾಗಿದ್ದು, ಇವರೆಲ್ಲರೂ ಸ್ವಿಗ್ಗಿ ಸಂಸ್ಥೆಯಲ್ಲಿ ಪಾರ್ಟ್ ಟೈಮ್ ಡೆಲಿವರಿ ಬಾಯ್ಸ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಬುಧವಾರ (ಜು.8) ರಾತ್ರಿ ಇವರೆಲ್ಲರೂ ಸೇರಿ ಟೂರ್ ಹೊರಟಿದ್ದರು. ಆದರೆ, ಅರಬೈಲ್ ಘಟ್ಟದ ಬಳಗಾರ್ ತಲುಪುತ್ತಿದ್ದಂತೆ ಎದುರಿನಿಂದ ಬಂದ ಲಾರಿ (KA 22 AA 1008) ಹಾಗೂ ಕ್ರೂಸರ್ ನಡುವೆ ಭೀಕರ ಅಪಘಾತ ನಡೆದಿದೆ.
ಡಿಕ್ಕಿಯ ರಭಸಕ್ಕೆ ಕ್ರೂಸರ್ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವವರನ್ನು ತಕ್ಷಣವೇ ಸ್ಥಳೀಯರ ನೆರವಿನಿಂದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸ್ಥಳಕ್ಕೆ ಯಲ್ಲಾಪುರ ಪೋಲಿಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಲಾರಿ ಹಾಗೂ ಕ್ರೂಸರ್ ನಡುವೆ ಸಂಭವಿಸಿದ ಈ ಭೀಕರ ಅಪಘಾತದಲ್ಲಿ ತಪ್ಪು ಯಾರದ್ದು ಎನ್ನುವ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಇದನ್ನೂ ಓದಿ : ಸಭೆ ನಡೆಯುತ್ತಿದ್ದಾಗಲೇ ಕುಸಿದು ಬಿದ್ದು ಭೂ ನ್ಯಾಯ ಮಂಡಳಿ ಸದಸ್ಯ ಸಾವು!



















