ಬೆಂಗಳೂರು : ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಮರುತನಿಖೆ ಕೋರಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆದಿದ್ದು, ಪ್ರಕರಣದ ಕುರಿತು ಯಾವುದೇ ಅಂತಿಮ ಆದೇಶ ನೀಡದ ನ್ಯಾಯಾಲಯ, ವಿಚಾರಣೆಯನ್ನು ಜುಲೈ 21ಕ್ಕೆ ಮುಂದೂಡಿದೆ.
ಈ ಹಿಂದೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಪ್ರಕರಣದ ಮರು ತನಿಖೆ ನಡೆಸುವಂತೆ ಕೋರಿ ಸೌಜನ್ಯ ತಾಯಿ ಕುಸುಮಾವತಿ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರ, ಸಿಬಿಐಗೆ ನೋಟಿಸ್ ಜಾರಿ ಮಾಡಿತ್ತು. ಸೌಜನ್ಯ ಪ್ರಕರಣದ ಎಲ್ಲಾ ಸಾಕ್ಷಿಗಳಿಗೆ ತಕ್ಷಣದಿಂದ ರಕ್ಷಣೆ ನೀಡಬೇಕು. ಕೆಲವು ಪ್ರಮುಖ ಸಾಕ್ಷಿಗಳು ಸಂಶಯಾಸ್ಪದವಾಗಿ ಸಾವನ್ನಪ್ಪಿರುವ ಹಿನ್ನೆಲೆ ಸಾಕ್ಷಿಗಳಿಗೆ ಕೂಡಲೇ ರಕ್ಷಣೆ ನೀಡಲು ಸುಪ್ರೀಂ ಕೋರ್ಟ್ ಸರ್ಕಾರಕ್ಕೆ ಸೂಚಿಸಿತ್ತು.
ಇಂದು ನಡೆದ ವಿಚಾರಣೆಯಲ್ಲಿ ಸುಪ್ರೀಂ ಕೋರ್ಟ್ ಯಾವುದೇ ಅಂತಿಮ ಆದೇಶ ನೀಡದೆ, ಪ್ರಕರಣದ ವಿಚಾರಣೆಯನ್ನು ಜುಲೈ 21ಕ್ಕೆ ಮುಂದೂಡಿದೆ. ಮುಂದಿನ ವಿಚಾರಣೆಯಲ್ಲಿ ನ್ಯಾಯಾಲಯ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದರ ಮೇಲೆ ಪ್ರಕರಣದ ಮುಂದಿನ ಬೆಳವಣಿಗೆಗಳು ಅವಲಂಬಿತವಾಗಿವೆ.
ಪ್ರಕರಣದ ಹಿನ್ನೆಲೆ :
2012ರ ಅಕ್ಟೋಬರ್ 9ರಂದು ಕಾಲೇಜಿಗೆ ತೆರಳಿದ್ದ 17 ವರ್ಷದ ಯುವತಿ ಸೌಜನ್ಯ ನಾಪತ್ತೆಯಾಗಿದ್ದು, ಮರುದಿನ ಆಕೆಯ ಮೃತದೇಹ ಪತ್ತೆಯಾಗಿತ್ತು. ಈ ಪ್ರಕರಣ ರಾಜ್ಯಾದ್ಯಂತ ಭಾರೀ ಸಂಚಲನಕ್ಕೆ ಕಾರಣವಾಗಿದ್ದು, ತನಿಖೆಯನ್ನು ಬಳಿಕ ಸಿಬಿಐಗೆ ವಹಿಸಲಾಗಿತ್ತು. ಪ್ರಕರಣದಲ್ಲಿ ಸಂತೋಷ್ ರಾವ್ ಅವರನ್ನು ಆರೋಪಿಯಾಗಿ ಬಂಧಿಸಿ ದೋಷಾರೋಪ ಪಟ್ಟಿ ಸಲ್ಲಿಸಲಾಗಿದ್ದರೂ, 2023ರಲ್ಲಿ ವಿಶೇಷ ಸಿಬಿಐ ನ್ಯಾಯಾಲಯ ಸಾಕ್ಷ್ಯಾಧಾರಗಳ ಕೊರತೆಯನ್ನು ಉಲ್ಲೇಖಿಸಿ ಅವರನ್ನು ಖುಲಾಸೆಗೊಳಿಸಿತ್ತು. ನ್ಯಾಯಾಲಯದ ತೀರ್ಪಿನ ಬಳಿಕ ಪ್ರಕರಣದಲ್ಲಿ ಮರುತನಿಖೆ ನಡೆಸಿ ನೈಜ ಆರೋಪಿಗಳನ್ನು ಪತ್ತೆಹಚ್ಚಬೇಕು ಎಂಬ ಒತ್ತಾಯ ರಾಜ್ಯಾದ್ಯಂತ ಜೋರಾಗಿತ್ತು. ವಿವಿಧ ಸಂಘಟನೆಗಳು, ಸಾರ್ವಜನಿಕರು ಹಾಗೂ ಸೌಜನ್ಯ ಪರ ಹೋರಾಟಗಾರರು ನಿರಂತರ ಹೋರಾಟ ನಡೆಸಿದ್ದು, ಬಳಿಕ ಮರುತನಿಖೆಗೆ ಕೋರಿ ಸುಪ್ರೀಂ ಕೋರ್ಟ್‌ಗೆ ಸೌಜನ್ಯ ತಾಯಿ ಕುಸುಮಾವತಿ ಅವರು ಅರ್ಜಿ ಸಲ್ಲಿಸಿದ್ದರು.
ಇದನ್ನೂ ಓದಿ : ಸೌಜನ್ಯ ಪ್ರಕರಣದ ಎಲ್ಲಾ ಸಾಕ್ಷಿಗಳಿಗೆ ತಕ್ಷಣ ರಕ್ಷಣೆ ನೀಡಬೇಕು : ಸುಪ್ರೀಂ ಕೋರ್ಟ್ ಸೂಚನೆ!



















