ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕಿನ ಯಶವಂತಪುರ ಹೋಬಳಿಯ ಹೇರೋಹಳ್ಳಿ ಗ್ರಾಮದ ಸರ್ವೆ ನಂ.56/1ರ ಅಕ್ರಮ ಬಡಾವಣೆಯಲ್ಲಿನ 80ಕ್ಕೂ ಹೆಚ್ಚು ನಿವೇಶನಗಳಿಗೆ ಕಾನೂನಿನ ನಿಯಮಗಳನ್ನು ಉಲ್ಲಂಘಿಸಿ ‘ಎ’ ಖಾತಾ ಹಾಗೂ ‘ಇ’ ಖಾತಾ ಮಾಡಿಕೊಟ್ಟಿರುವ ಆರೋಪ ಎದುರಿಸುತ್ತಿರುವ ಹೇರೋಹಳ್ಳಿ ಉಪ ವಿಭಾಗದ ಸಹಾಯಕ ಕಂದಾಯ ಅಧಿಕಾರಿ (ARO) ಮಂಜುಳಾ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಹಿರಿಯ ಅಧಿಕಾರಿಗಳು ಸ್ಪಷ್ಟ ಆದೇಶ ನೀಡಿದ್ದರೂ, ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇವಲ NCR ದಾಖಲಿಸಿರುವುದನ್ನು ಪ್ರಶ್ನಿಸಿ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಭ್ರಷ್ಟಾಚಾರ ವಿರೋಧಿ ವೇದಿಕೆ ಅಧ್ಯಕ್ಷ ಎನ್.ಆರ್. ರಮೇಶ್ ಅವರು ದೂರು ಸಲ್ಲಿಸಿದ್ದಾರೆ.

ದೂರಿನಲ್ಲಿ, ಅಕ್ರಮವಾಗಿ ನಿರ್ಮಾಣಗೊಂಡ ಬಡಾವಣೆಯಲ್ಲಿನ 80ಕ್ಕೂ ಹೆಚ್ಚು ನಿವೇಶನಗಳಿಗೆ ಕಾನೂನಿನ ಎಲ್ಲ ನಿಯಮಗಳನ್ನು ಗಾಳಿಗೆ ತೂರಿ ‘ಎ’ ಖಾತಾ ಹಾಗೂ ‘ಇ’ ಖಾತಾಗಳನ್ನು ಮಾಡಿಕೊಡುವ ಮೂಲಕ ಪಾಲಿಕೆಗೆ ಕೋಟ್ಯಂತರ ರೂಪಾಯಿ ನಷ್ಟ ಉಂಟು ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ARO ಮಂಜುಳಾ ಅವರನ್ನು ತಕ್ಷಣ ಸೇವೆಯಿಂದ ವಜಾಗೊಳಿಸಿ ಇಲಾಖಾ ವಿಚಾರಣೆ ನಡೆಸಬೇಕು ಹಾಗೂ ಕಾನೂನುಬಾಹಿರವಾಗಿ ನೀಡಿರುವ ಎಲ್ಲ ಖಾತಾಗಳನ್ನು ರದ್ದುಪಡಿಸಬೇಕು ಎಂದು ಮೇ 11 ಮತ್ತು ಮೇ 29ರಂದು ಸಂಬಂಧಪಟ್ಟ ದಾಖಲೆಗಳೊಂದಿಗೆ GBA ಮುಖ್ಯ ಆಯುಕ್ತರು, ವಿಶೇಷ ಆಯುಕ್ತರು (ಕಂದಾಯ) ಹಾಗೂ ಬೆಂಗಳೂರು ಪಶ್ಚಿಮ ನಗರ ಪಾಲಿಕೆ ಆಯುಕ್ತರಿಗೆ ದೂರು ಸಲ್ಲಿಸಲಾಗಿತ್ತು ಎಂದು ಎನ್.ಆರ್. ರಮೇಶ್ ತಿಳಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಕರ್ನಾಟಕ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನೂ ದಾಖಲಿಸಲಾಗಿದೆ. ದಾಖಲೆಗಳ ಪರಿಶೀಲನೆಯ ಬಳಿಕ ARO ಮಂಜುಳಾ ಅವರು ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವುದು ಹಾಗೂ ಕಾನೂನುಬಾಹಿರವಾಗಿ ಕಾರ್ಯನಿರ್ವಹಿಸಿರುವುದು ಕಂಡುಬಂದ ಹಿನ್ನೆಲೆ, ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ GBA ಮುಖ್ಯ ಆಯುಕ್ತ ಡಾ. ಮಹೇಶ್ವರ್ ರಾವ್ ಹಾಗೂ ಬೆಂಗಳೂರು ಪಶ್ಚಿಮ ನಗರ ಪಾಲಿಕೆ ಆಯುಕ್ತ ಕೆ.ವಿ. ರಾಜೇಂದ್ರ ಅವರು ಜೂನ್ 20ರಂದು ಕೆಂಗೇರಿ ವಿಭಾಗದ ಕಂದಾಯ ಅಧಿಕಾರಿಗಳಿಗೆ ಸ್ಪಷ್ಟ ಆದೇಶ ನೀಡಿದ್ದರು.
ಆ ಆದೇಶದಂತೆ ಕೆಂಗೇರಿ ವಿಭಾಗದ ಕಂದಾಯ ಅಧಿಕಾರಿ ಲೋಕಮಾತಾ ಅವರು ಎಲ್ಲಾ ದಾಖಲೆಗಳೊಂದಿಗೆ ಬ್ಯಾಡರಹಳ್ಳಿ ಪೊಲೀಸ್ ಠಾಣೆಗೆ ತೆರಳಿದ್ದರೂ, ಸುಮಾರು ಎರಡು ದಿನಗಳ ಕಾಲ ಕಾಯಿಸಿದ ಬಳಿಕ ಮಾತ್ರ ಪ್ರಕರಣ ದಾಖಲಿಸಲಾಗಿದೆ ಎಂದು ಆರೋಪಿಸಲಾಗಿದೆ. ಆದರೆ, ಭ್ರಷ್ಟಾಚಾರ ಹಾಗೂ ಕೋಟ್ಯಂತರ ರೂಪಾಯಿ ವಂಚನೆ ಆರೋಪಗಳಿದ್ದರೂ, ಹಿರಿಯ ಐಎಎಸ್ ಅಧಿಕಾರಿಗಳ ಸ್ಪಷ್ಟ ನಿರ್ದೇಶನಗಳಿದ್ದರೂ ಸಹ ಪೊಲೀಸ್ ಇನ್ಸ್‌ಪೆಕ್ಟರ್ ಅವರು ಯಾರದ್ದೋ ಒತ್ತಡಕ್ಕೆ ಮಣಿದು FIR ದಾಖಲಿಸದೆ ಕೇವಲ NCR ದಾಖಲಿಸಿ ಕರ್ತವ್ಯ ಲೋಪ ಎಸಗಿದ್ದಾರೆ ಎಂದು ಎನ್.ಆರ್ ರಮೇಶ್ ದೂರಿನಲ್ಲಿ ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಕಾನೂನುಬದ್ಧ ಹಾಗೂ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ದಾಖಲೆಗಳ ಸಮೇತ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಭ್ರಷ್ಟಾಚಾರ ವಿರೋಧಿ ವೇದಿಕೆ ಅಧ್ಯಕ್ಷ ಎನ್.ಆರ್ ರಮೇಶ್ ದೂರು ನೀಡಿದ್ದಾರೆ. ಪ್ರಕರಣದ ಕುರಿತು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅವರು ಆಗ್ರಹಿಸಿದ್ದಾರೆ.
ಇದನ್ನೂ ಓದಿ : MNC ಜಾಬ್ ಕೊಡಿಸುವ ಆಮಿಷ ಒಡ್ಡಿ ಸಾವಿರಾರು ಮಂದಿಗೆ ವಂಚನೆ ; ಖತರ್ನಾಕ್ ಗ್ಯಾಂಗ್ ಬಂಧನ!



















