ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದಲ್ಲಿ (KPSC) ಮತ್ತೊಂದು ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿರುವ ಆರೋಪ ಕೇಳಿಬಂದಿದೆ. ಪಶು ವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಭಾರೀ ಗೋಲ್ಮಾಲ್ ನಡೆದಿದೆ ಎಂದು ಅಭ್ಯರ್ಥಿಗಳು ಗಂಭೀರ ಆರೋಪ ಮಾಡಿದ್ದು, ಇಡೀ ನೇಮಕಾತಿ ಪ್ರಕ್ರಿಯೆಯನ್ನು ರದ್ದುಪಡಿಸಿ ಮರು ನೇಮಕಾತಿ ಪ್ರಕ್ರಿಯೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

400 ಪಶು ವೈದ್ಯಾಧಿಕಾರಿಗಳ ಹುದ್ದೆಗಳ ನೇಮಕಾತಿಗಾಗಿ ಜನವರಿ 8ರಂದು ಪರೀಕ್ಷೆ ನಡೆದಿತ್ತು. ಜುಲೈ 17ರಂದು ಫಲಿತಾಂಶ ಪ್ರಕಟವಾಗಿದ್ದು, ಫಲಿತಾಂಶ ಕಂಡು ಅಭ್ಯರ್ಥಿಗಳು ಆತಂಕಕ್ಕೆ ಒಳಗಾಗಿದ್ದಾರೆ. ಇತ್ತೀಚೆಗಷ್ಟೇ ಅಮಾನತುಗೊಂಡಿರುವ ಶಿವಶಂಕರಪ್ಪ ಸಾಹುಕಾರ್ ಅವರ ಕೈವಾಡವೂ ಈ ಅಕ್ರಮದಲ್ಲಿ ಇದೆ ಎಂದು ಆಕಾಂಕ್ಷಿಗಳು ಆರೋಪಿಸಿದ್ದಾರೆ.

ಪಶು ವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಶೇಕಡ 60ರಷ್ಟು ಅಕ್ರಮ ನಡೆದಿದೆ ಎಂದು ಅಭ್ಯರ್ಥಿಗಳು ಗಂಭೀರ ಆರೋಪ ಮಾಡಿದ್ದು, ಗ್ರೂಪ್ ಎ ಹುದ್ದೆಯಾಗಿರುವ ಪಶು ವೈದ್ಯಾಧಿಕಾರಿ ಹುದ್ದೆಗಳನ್ನು ಮಧ್ಯವರ್ತಿಗಳ ಮೂಲಕ ಭಾರೀ ಮೊತ್ತಕ್ಕೆ ಮಾರಾಟ ಮಾಡಲಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಒಂದು ಹುದ್ದೆ ಬರೋಬ್ಬರಿ 80 ಲಕ್ಷ ರೂಪಾಯಿಗೆ ಬಿಕರಿಯಾಗಿರುವ ಆರೋಪ ಕೇಳಿಬಂದಿದೆ. ಅಭ್ಯರ್ಥಿಗಳಿಗೆ ಕರೆ ಮಾಡಿ ಹಣ ನೀಡುವಂತೆ ಬೇಡಿಕೆ ಇಡಲಾಗಿದೆ ಎಂದು ಆರೋಪಿಸಿರುವ ವಿದ್ಯಾರ್ಥಿಗಳು, ಈ ಸಂಬಂಧದ ಆಡಿಯೋ ಮತ್ತು ಫೋಟೋಗಳನ್ನು ಬಿಡುಗಡೆ ಮಾಡಿದ್ದಾರೆ. “ಕಾಸು ಕೊಟ್ಟರೆ ಜಾಬ್” ಎಂಬ ರೀತಿಯಲ್ಲಿ ವ್ಯವಹಾರ ನಡೆದಿದೆ ಎಂದು ಆರೋಪಿಸಿರುವ ಅಭ್ಯರ್ಥಿಗಳು, ಪಶು ವೈದ್ಯಾಧಿಕಾರಿ ಅಂತಿಮ ಪಟ್ಟಿ ಪ್ರಕಟಿಸಲು 80 ಲಕ್ಷ ರೂಪಾಯಿ ಬೇಡಿಕೆ ಇಟ್ಟಿರುವ ಏಜೆಂಟ್‌ಗಳ ವಿರುದ್ಧವೂ ಆರೋಪ ಮಾಡಿದ್ದಾರೆ.

ಇನ್ನು, ಅಕ್ರಮದ ಆರೋಪಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಸ್ವತಃ ಸ್ಟಿಂಗ್ ಆಪರೇಷನ್ ನಡೆಸಿದ್ದಾರೆ. ಹಣದ ಬೇಡಿಕೆ ಇಟ್ಟಿರುವ ಮಧ್ಯವರ್ತಿಗಳೊಂದಿಗೆ ನಡೆದ ಮಾತುಕತೆಗಳ ಆಡಿಯೋ ಹಾಗೂ ಇತರ ದಾಖಲೆಗಳನ್ನು ಸಂಗ್ರಹಿಸಲಾಗಿದೆ ಎಂದು ಅಭ್ಯರ್ಥಿಗಳು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ನೇಮಕಾತಿ ಪ್ರಕ್ರಿಯೆ ಸಂಪೂರ್ಣವಾಗಿ ಪಾರದರ್ಶಕವಾಗಿಲ್ಲ ಎಂಬ ಅನುಮಾನ ವ್ಯಕ್ತಪಡಿಸಿರುವ ಅವರು, ಇಡೀ ಪ್ರಕ್ರಿಯೆಯನ್ನು ರದ್ದುಪಡಿಸಿ ಹೊಸದಾಗಿ ಪರೀಕ್ಷೆ ಮತ್ತು ನೇಮಕಾತಿ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ. ಈ ಸಂಬಂಧ 50ಕ್ಕೂ ಹೆಚ್ಚು ಅಭ್ಯರ್ಥಿಗಳು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಇಂದು ದೂರು ದಾಖಲಿಸಿದ್ದಾರೆ.

ವಿದ್ಯಾರ್ಥಿ ಸಂಘಟನೆ ಅಧ್ಯಕ್ಷ ಕಾಂತ್ ಕುಮಾರ್ ಈ ಬಗ್ಗೆ ಮಾತನಾಡಿ, ಇದು ಕೇವಲ ಕ್ರಮ ಕೈಗೊಳ್ಳುವ ವಿಚಾರವಲ್ಲ, ಇಂತಹ ಅಕ್ರಮದಲ್ಲಿ ಭಾಗಿಯಾಗಿರುವವರಿಗೆ ಗಲ್ಲು ಶಿಕ್ಷೆಯಾಗಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಅಮಾನತುಗೊಂಡಿರುವ ಶಿವಶಂಕರಪ್ಪ ಸೇರಿದಂತೆ ಹಲವು KPSC ಸದಸ್ಯರು ಅಕ್ರಮದಲ್ಲಿ ಭಾಗಿಯಾಗಿದ್ದಾರೆ. ಮಧ್ಯವರ್ತಿಗಳ ಮೂಲಕ ಭಾರೀ ಮಟ್ಟದಲ್ಲಿ ಹಣದ ವ್ಯವಹಾರ ನಡೆದಿದೆ. ಅಭ್ಯರ್ಥಿಗಳಿಗೆ ಕರೆ ಮಾಡಿ ಹಣ ಕೊಡುವಂತೆ ಬೇಡಿಕೆ ಇಡಲಾಗಿದೆ ಎಂದು ಹೇಳಿದ್ದಾರೆ.

ಇನ್ನು, UPSC ಪರೀಕ್ಷೆ ಬರೆದಿರುವ ಪ್ರತಿಭಾವಂತ ಅಭ್ಯರ್ಥಿಗಳೇ ಪಾಸ್ ಆಗಲು ಕಷ್ಟಪಡುತ್ತಾರೆ. ಆದರೆ ಶಿವಶಂಕರಪ್ಪ ಅವರ ಸಂಬಂಧಿಕರು ಮೆರಿಟ್ ಅಂಕಗಳನ್ನು ಗಳಿಸಿ ಆಯ್ಕೆಯಾಗಿರುವುದು ಹೇಗೆ ಸಾಧ್ಯ ಎಂದು ಅಭ್ಯರ್ಥಿಗಳು ಪ್ರಶ್ನಿಸಿದ್ದಾರೆ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ 300 ಅಂಕಗಳನ್ನು ದಾಟುವುದೇ ಕಷ್ಟವಾಗಿರುವ ಸಂದರ್ಭದಲ್ಲಿ, ಮೆರಿಟ್ ಲಿಸ್ಟ್‌ನಲ್ಲಿ ಬಂದವರು ಹೇಗೆ ಆಯ್ಕೆಯಾದರು ಎಂಬ ಬಗ್ಗೆ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
ಪಶು ವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಸರ್ಕಾರ ಮತ್ತು KPSC ಕೂಡಲೇ ತನಿಖೆ ನಡೆಸಿ ಸತ್ಯಾಂಶವನ್ನು ಬಹಿರಂಗಪಡಿಸಬೇಕು. ಅಕ್ರಮ ಸಾಬೀತಾದರೆ ಇಡೀ ನೇಮಕಾತಿ ಪ್ರಕ್ರಿಯೆಯನ್ನು ರದ್ದುಪಡಿಸಿ ಮರು ಪ್ರಕ್ರಿಯೆ ನಡೆಸಬೇಕು ಎಂದು ಅಭ್ಯರ್ಥಿಗಳು ಒತ್ತಾಯಿಸಿದ್ದಾರೆ.
ಇದನ್ನೂ ಓದಿ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಮರದ ಕೊಂಬೆ : ಚಾಲಕನಿಗೆ ಗಂಭೀರ ಗಾಯ!



















