ನವದೆಹಲಿ : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದ್ರೆ, ಸಿಜೆಪಿ ತನ್ನ ಪ್ರತಿಭಟನೆ ಇಲ್ಲಿಗೆ ನಿಲ್ಲಿಸುತ್ತಾ ಅಥವಾ ಮುಂದುವರೆಸುತ್ತಾ ಎನ್ನುವ ಬಗ್ಗೆ ಇನ್ನೂ ಗೊಂದಲದಲ್ಲಿದೆ.
ಈ ಮಧ್ಯೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್ ವಾಂಗ್ಚುಕ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಇದು ಪ್ರಜಾಪ್ರಭುತ್ವದ ಗೆಲುವು ಎಂದು ಹೋರಾಟವನ್ನು ಬಣ್ಣಿಸಿದ್ದಾರೆ.
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಮತ್ತು ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆಗೆ ಒತ್ತಾಯಿಸಿ ಜೂನ್ 28 ರಂದು ನಡೆದ ಕಾಕ್ರೋಚ್ ಜನತಾ ಪಾರ್ಟಿ (CJP) ಪ್ರತಿಭಟನೆಯಲ್ಲಿ ಸೋನಮ್ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಆರಂಭಿಸಿದ್ದರು. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಷಯದ ಬಗ್ಗೆ ಸಂಸತ್ತಿನಲ್ಲಿ ಚರ್ಚೆ, ಪ್ರತಿಭಟನಾ ನಿರತ ವಿದ್ಯಾರ್ಥಿಗಳ ವಿರುದ್ಧ ಯಾವುದೇ ಕಾನೂನು ಕ್ರಮ ಹಿಂತೆಗೆದುಕೊಳ್ಳುವುದು ಮತ್ತು ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯ ನಂತರ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ಪರಿಹಾರ ನೀಡುವುದಾಗಿ ಸರ್ಕಾರ ಭರವಸೆ ನೀಡಿದ ನಂತರ ಅವರು ಗುರುವಾರ ರಾತ್ರಿ ತಮ್ಮ 26 ದಿನಗಳ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದರು.
ಸದ್ಯ ವಾಂಗ್ಚುಕ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿದ್ಯಾರ್ಥಿಗಳ ಹೋರಾಟದ ಫಲವಾಗಿ ಕೇಂದ್ರ ಸಚಿವರ ರಾಜೀನಾಮೆ ಬೆನ್ನಲ್ಲೇ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಆಸ್ಪತ್ರೆಯ ಬೆಡ್ ಮೇಲಿರುವ ವಾಂಗ್ಚುಕ್ ವಿಕ್ಟರಿ ಚಿಹ್ನೆಯನ್ನು ತೋರಿಸುವ ಮೂಲಕ ವಿಜಯೋತ್ಸವ ಸಂದೇಶ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ : ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ನಟಿ ರಮ್ಯಾ ಸಂತಸ : ‘ಹೋರಾಟಕ್ಕೆ ಸಿಕ್ಕ ಜಯ’ ಎಂದ ಮೋಹಕತಾರೆ!


















