ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿರುವ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಆರೋಪ ಸಂಬಂಧ ದಾಖಲಾಗಿರುವ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ವೇಗ ನೀಡಿದ್ದು, ತನಿಖಾಧಿಕಾರಿಯಾಗಿ ಸಿಐಡಿ ಎಸ್‌ಪಿ ರಾಘವೇಂದ್ರ ಹೆಗಡೆ ಅವರನ್ನು ನೇಮಕ ಮಾಡಲಾಗಿದೆ.
ಇತ್ತೀಚೆಗೆ ರಾಘವೇಂದ್ರ ಹೆಗಡೆ ಅವರನ್ನು ಸಿಐಡಿಗೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಇದೀಗ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ನಡೆದಿರುವ ಅಕ್ರಮ ಪ್ರಕರಣದ ತನಿಖೆಯ ಜವಾಬ್ದಾರಿಯನ್ನು ಅವರಿಗೆ ವಹಿಸಲಾಗಿದೆ.
ಕರ್ನಾಟಕ ಸಾರ್ವಜನಿಕ ಪರೀಕ್ಷಾ ಕಾಯ್ದೆ ಅಡಿಯಲ್ಲಿ ಕೇಸ್ ದಾಖಲೆ ಹಿನ್ನಲೆ ಡಿಜಿಪಿ ಪ್ರಣವ್ ಮೊಹಂತಿ ಅವರು ಸಿಐಡಿ ಎಸ್‌ಪಿ ರಾಘವೇಂದ್ರ ಹೆಗಡೆ ಅವರನ್ನು ಅಧಿಕೃತವಾಗಿ ತನಿಖಾಧಿಕಾರಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಸದ್ಯ ಸಿಐಡಿ ಎಸ್‌ಪಿ ರಾಘವೇಂದ್ರ ಹೆಗಡೆ ಅವರು ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಂಗ್ರಹಿಸುವ ಕಾರ್ಯ ಆರಂಭಿಸಿದ್ದು, ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿರುವ ಅಕ್ರಮಗಳ ಕುರಿತು ಸಮಗ್ರ ತನಿಖೆ ನಡೆಸಲಿದ್ದಾರೆ.
ಇದನ್ನೂ ಓದಿ : 100 ಅಡಿ ತುಂಬಿದ KRS ನೀರಿನ ಮಟ್ಟ.. ರೈತರು ಖುಷ್!



















