ಬೆಂಗಳೂರು: ಅಕ್ರಮ ಬಾಂಗ್ಲಾದೇಶಿ ವಲಸಿಗರ ಪತ್ತೆಗಾಗಿ ಬೆಂಗಳೂರಿನ ವೈಟ್‌ಫೀಲ್ಡ್ ವಿಭಾಗದ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. ಆರು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಒಟ್ಟು 30 ಕಡೆ ದಾಳಿ ನಡೆಸಿ, ಅನುಮಾನಾಸ್ಪದವಾಗಿ ಕಂಡುಬಂದ ಸುಮಾರು 40 ಮಂದಿಯನ್ನು ವಶಕ್ಕೆ ಪಡೆದು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ವರ್ತೂರು ಸೇರಿದಂತೆ ವಿವಿಧ ಪ್ರದೇಶಗಳಲ್ಲಿರುವ ಶೆಡ್‌ಗಳಲ್ಲಿ ಪೊಲೀಸರು ತಪಾಸಣೆ ನಡೆಸಿದ್ದಾರೆ. ನೂರಕ್ಕೂ ಹೆಚ್ಚು ಶೆಡ್‌ಗಳಿರುವ ಪ್ರದೇಶಗಳಲ್ಲೂ ಕಾರ್ಯಾಚರಣೆ ಕೈಗೊಂಡಿದ್ದು, ಅಲ್ಲಿರುವ ಪ್ರತಿಯೊಬ್ಬ ವ್ಯಕ್ತಿ ಹಾಗೂ ಮಹಿಳೆಯರ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ.
ವಶಕ್ಕೆ ಪಡೆದವರ ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ವೋಟರ್ ಐಡಿ ಸೇರಿದಂತೆ ವಿವಿಧ ದಾಖಲೆಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ದಾಖಲೆಗಳಲ್ಲಿ ಅಥವಾ ಮಾಹಿತಿ ನೀಡುವಲ್ಲಿ ಗೊಂದಲ ಕಂಡುಬಂದಿರುವವರನ್ನು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಲಾಗುತ್ತಿದೆ.
ಮುಖ್ಯವಾಗಿ ಎಸ್‌ಐಆರ್ ಮಾಹಿತಿ ಸೇರಿದಂತೆ ಅವರ ಸ್ವಂತ ಊರು, ಪೋಸ್ಟ್ ಆಫೀಸ್ ಹಾಗೂ ಸ್ಥಳೀಯ ಪೊಲೀಸ್ ಠಾಣೆಯ ವಿವರಗಳನ್ನು ಪೊಲೀಸರು ಕೇಳುತ್ತಿದ್ದಾರೆ. ದಾಖಲೆಗಳಲ್ಲಿರುವ ಮಾಹಿತಿಗೂ ವ್ಯಕ್ತಿಗಳು ನೀಡುವ ಮಾಹಿತಿಗೂ ಹೊಂದಾಣಿಕೆ ಇದೆಯೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ.



















