ಬೀದರ್: ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಚಲಿಸುತ್ತಿದ್ದಾಗಲೇ ಕಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟು ಕರಕಲಾದ ಘಟನೆ ಬಸವಕಲ್ಯಾಣ ತಾಲ್ಲೂಕಿನಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ-65ರ ತಡೋಳಾ ಗ್ರಾಮದ ಸಮೀಪ ಈ ಘಟನೆ ನಡೆದಿದ್ದು, ಹೈದ್ರಾಬಾದ್ ಮೂಲದ ಪೀರಾಬಾಸ್ಕರ್ ಎಂಬುವವರಿಗೆ ಸೇರಿದ ಕ್ರೆಟಾ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಮಹಾರಾಷ್ಟ್ರದಿಂದ ಹೈದ್ರಾಬಾದ್ ಕಡೆಗೆ ದಂಪತಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ತಡೋಳಾ ಗ್ರಾಮದ ಸಮೀಪ ಬರುತ್ತಿದ್ದಂತೆ ಕಾರಿನ ಇಂಜಿನ್‌ನಲ್ಲಿ ಹೊಗೆ ಕಾಣಿಸಿಕೊಂಡಿದೆ.
ತಕ್ಷಣವೇ ಕಾರನ್ನು ನಿಲ್ಲಿಸಿ ದಂಪತಿ ಕೆಳಗಿಳಿದಿದ್ದಾರೆ. ಕೆಲವೇ ಕ್ಷಣಗಳಲ್ಲಿ ಕಾರಿಗೆ ಬೆಂಕಿ ಆವರಿಸಿದ್ದು, ನೋಡನೋಡುತ್ತಿದ್ದಂತೆ ಸಂಪೂರ್ಣ ಕಾರು ಹೊತ್ತಿ ಉರಿದಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಬಸವಕಲ್ಯಾಣ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಕಾರಿನಲ್ಲಿದ್ದ ದಂಪತಿ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ. ಪ್ರಾಥಮಿಕವಾಗಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಘಟನೆ ಬಸವಕಲ್ಯಾಣ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಇದನ್ನೂ ಓದಿ : ಬೆಂಗಳೂರಿನಲ್ಲಿ ಡೆಲಿವರಿ ಬಾಯ್ ಮೇಲೆ ಹಲ್ಲೆ



















