ಬೆಂಗಳೂರು : ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಸಿಗದೆ ಬೇಸರಗೊಂಡಿರುವ ಕಾಂಗ್ರೆಸ್‌ನ ಸಚಿವ ಆಕಾಂಕ್ಷಿಗಳು ಇದೀಗ ಒಂದೆಡೆ ಸೇರಿ ರಹಸ್ಯ ಚರ್ಚೆ ನಡೆಸಿದ್ದಾರೆ. ಮಾಜಿ ಸಚಿವ ಹೆಚ್.ಸಿ. ಮಹದೇವಪ್ಪ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಮಾಜಿ ಸಚಿವ ಎಂ.ಸಿ. ಸುಧಾಕರ್ ಹಾಗೂ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಎ.ಎಸ್. ಪೊನ್ನಣ್ಣ ಭಾಗಿಯಾಗಿದ್ದು, ಸಚಿವ ಸ್ಥಾನ ಸಿಗದಿರುವ ಬಗ್ಗೆ ಹಾಗೂ ಇತ್ತೀಚಿನ ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತು ನಾಯಕರು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಸಚಿವ ಸ್ಥಾನಕ್ಕಾಗಿ ಭಾರೀ ಕಸರತ್ತು ನಡೆಸಿದ್ದ ನಾಯಕರಿಗೆ ಕೊನೆ ಕ್ಷಣದಲ್ಲಿ ಸಚಿವ ಸ್ಥಾನ ಕೈತಪ್ಪಿದ್ದು ನಿರಾಸೆ ಮೂಡಿಸಿದೆ. ಕಳೆದ ವಾರ ಸಚಿವ ಸ್ಥಾನ ಸಿಗದಿರುವ ಬಗ್ಗೆ ಅಸಮಾಧಾನಗೊಂಡಿದ್ದ ಹೆಚ್.ಸಿ. ಮಹದೇವಪ್ಪ ಅವರು ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಮಾತುಕತೆ ನಡೆಸಿ ವಾಪಸ್ಸಾಗಿದ್ದರು. ಇದೇ ವೇಳೆ ಸಚಿವ ಸ್ಥಾನ ಸಿಗುವ ನಿರೀಕ್ಷೆಯಲ್ಲಿದ್ದ ಎಂ.ಸಿ. ಸುಧಾಕರ್ ಅವರಿಗೂ ಮಂತ್ರಿಗಿರಿ ಕೈತಪ್ಪಿದೆ.
ಸಚಿವ ಸ್ಥಾನ ಕೈತಪ್ಪಿದ ಬಳಿಕ ಮಾಜಿ ಸಚಿವ ಎಂ.ಸಿ. ಸುಧಾಕರ್ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದರು. ಈ ಹಿನ್ನೆಲೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಸುಧಾಕರ್ ಅವರೊಂದಿಗೆ ಮಾತುಕತೆ ನಡೆಸಿ ಅಸಮಾಧಾನ ವ್ಯಕ್ತಪಡಿಸದಂತೆ ಸೂಚಿಸಿದ್ದರು. ಸಿಎಂ ಡಿ.ಕೆ. ಶಿವಕುಮಾರ್ ಅವರ ಕಡೆಯಿಂದಲೂ ಈ ಬಗ್ಗೆ ಸೂಚನೆ ನೀಡಲಾಗಿತ್ತು.
ಇತ್ತ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎಂಬ ವಿಶ್ವಾಸದಲ್ಲಿದ್ದ ಎ.ಎಸ್. ಪೊನ್ನಣ್ಣ ಅವರಿಗೂ ಸಂಪುಟ ವಿಸ್ತರಣೆಯಲ್ಲಿ ನಿರಾಸೆಯಾಗಿದೆ. ಸಚಿವ ಸ್ಥಾನಕ್ಕಾಗಿ ನಿರೀಕ್ಷೆ ಇಟ್ಟುಕೊಂಡಿದ್ದರೂ ಅವಕಾಶ ಸಿಗದ ಹಿನ್ನೆಲೆ ಪೊನ್ನಣ್ಣ ಕೂಡ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಮಹದೇವಪ್ಪ ಅವರ ನಿವಾಸದಲ್ಲಿ ನಡೆದ ಸಭೆ ಕುತೂಹಲ ಮೂಡಿಸಿದೆ.
ಸಚಿವ ಸ್ಥಾನ ಸಿಗದಿರುವುದು, ಮುಂದಿನ ರಾಜಕೀಯ ನಡೆ ಹಾಗೂ ಪಕ್ಷದಲ್ಲಿ ತಮ್ಮ ಸ್ಥಾನಮಾನದ ಬಗ್ಗೆ ನಾಯಕರು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಒಂದೇ ವೇದಿಕೆಯಲ್ಲಿ ಸಚಿವ ಆಕಾಂಕ್ಷಿಗಳು ಹಾಗೂ ಸಚಿವ ಸ್ಥಾನ ಕಳೆದುಕೊಂಡಿರುವ ಹಿರಿಯ ನಾಯಕರು ಸೇರಿರುವುದು ಕಾಂಗ್ರೆಸ್ ಪಾಳಯದಲ್ಲಿ ಮತ್ತಷ್ಟು ಚರ್ಚೆಗೆ ಕಾರಣವಾಗಿದೆ. ಸದ್ಯ ಸಚಿವ ಸ್ಥಾನ ಸಿಗದಿರುವ ಆಕಾಂಕ್ಷಿಗಳ ಅಸಮಾಧಾನ ಮುಂದಿನ ದಿನಗಳಲ್ಲಿ ಯಾವ ಸ್ವರೂಪ ಪಡೆಯಲಿದೆ ಎಂಬ ಕುತೂಹಲ ಮೂಡಿದೆ.
ಇದನ್ನೂ ಓದಿ : ಉಡುಪಿಯಲ್ಲಿ ‘ಜೈಲ್ ಭರೋ’ ಪ್ರತಿಭಟನೆ : ರಸ್ತೆ ತಡೆದ ಕಾರ್ಯಕರ್ತರು ಪೊಲೀಸ್ ವಶಕ್ಕೆ!



















