ಬೆಂಗಳೂರು : ಹಿರಿಯ ಕನ್ನಡ ಪರ ಹೋರಾಟಗಾರ, ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ಬಂಧಿಸಿರುವುದನ್ನು ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಅವರು ತೀವ್ರವಾಗಿ ಖಂಡಿಸಿದ್ದಾರೆ.
ಕಾವೇರಿ ನೀರು ವಿವಾದ ಮತ್ತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಹಾಗೂ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಆದೇಶಗಳನ್ನು ಖಂಡಿಸಿ ಶುಕ್ರವಾರ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿತ್ತು. ಈ ಬಂದ್‌ನ ಭಾಗವಾಗಿ, ಪ್ರಮುಖ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ಬೆಂಗಳೂರಿನಲ್ಲಿ ವಶಕ್ಕೆ ಪಡೆದಿದ್ದಾರೆ. ವಾಟಾಳ್ ನಾಗರಾಜ್ ಅವರು ಮೆಜೆಸ್ಟಿಕ್ ಕಡೆಗೆ ತೆರಳಲು ತಮ್ಮ ಮನೆಯಿಂದ ಹೊರಬರುತ್ತಿದ್ದಂತೆಯೇ, ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ಅವರನ್ನು ತಡೆದು ಬಂಧಿಸಿದ್ದಾರೆ.
ಈ ಕುರಿತು ವಿಡಿಯೋ ಹಂಚಿಕೊಂಡಿರುವ ಕರವೇ ಪ್ರವೀಣ್ ಕುಮಾರ್ ಶೆಟ್ಟಿ, ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಬಂಧಿಸುವ ಮೂಲಕ ಅವರ ಹೋರಾಟದ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನ ಮಾಡಬಾರದು, ಹೋರಾಟಗಾರರ ಹಕ್ಕುಗಳನ್ನು ಗೌರವಿಸುವಂತೆ ಸರ್ಕಾರ ಹಾಗೂ ಪೊಲೀಸರಿಗೆ ಆಗ್ರಹಿಸಿದ್ದಾರೆ.
ಹಿರಿಯ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಕೂಡಲೇ ಬಿಡುಗಡೆ ಮಾಡಬೇಕು. ಕನ್ನಡದ ಪರವಾಗಿ ಹೋರಾಟ ನಡೆಸುತ್ತಿರುವವರ ಮೇಲೆ ಇಂತಹ ಕ್ರಮಗಳನ್ನು ಕೈಗೊಳ್ಳುವುದು ಸರಿಯಲ್ಲ ಎಂದು ಪ್ರವೀಣ್ ಕುಮಾರ್ ಶೆಟ್ಟಿ ಒತ್ತಾಯಿಸಿದ್ದಾರೆ.
ಇದನ್ನೂ ಓದಿ : ಕರ್ನಾಟಕ ಬಂದ್ ಮಧ್ಯೆ ಸಿಎಂ ಡಿಕೆಶಿಯನ್ನು ಭೇಟಿಯಾದ ಕನ್ನಡಪರ ಹೋರಾಟಗಾರರು!



















