ಚಾಮರಾಜನಗರ : ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶಾಗ್ಯ ಸಮೀಪದ ಹೊಳೆದಟ್ಟಿ ಅರಣ್ಯ ಪ್ರದೇಶದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ಗೆ ಮೂವರು ಬಲಿಯಾಗಿದ್ದಾರೆ.
ಘಟನೆಯ ನಂತರ ಆಕ್ರೋಶಗೊಂಡ ಮೃತರ ಸಂಬಂಧಿಕರು ಅರಣ್ಯ ಇಲಾಖೆಯ ಕಚೇರಿಯನ್ನು ಧ್ವಂಸಗೊಳಿಸಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಶಾಗ್ಯ ವ್ಯಾಪ್ತಿಯ ದಟ್ಟಿ ಅರಣ್ಯ ಪ್ರದೇಶದಲ್ಲಿ ಕಾಡಿಗೆ ನುಗ್ಗಿ ಬೇಟೆಗಾರರು ಕಾಡುಪ್ರಾಣಿಯನ್ನು ಬೇಟೆಯಾಡಿ ಅದರ ಮಾಂಸವನ್ನು ಬೇರ್ಪಡಿಸುತ್ತಿದ್ದರು ಎಂದು ಆರೋಪಿಸಲಾಗಿದೆ. ಗಸ್ತಿನಲ್ಲಿದ್ದ ಕಾವೇರಿ ವನ್ಯಜೀವಿಧಾಮದ ಅರಣ್ಯ ಸಿಬ್ಬಂದಿ ಬಂದಾಗ ಘಟನೆ ಬೆಳಕಿಗೆ ಬಂದಿದೆ.
ಅರಣ್ಯ ಸಿಬ್ಬಂದಿ ತಕ್ಷಣವೇ ಶಸ್ತ್ರಾಸ್ತ್ರಗಳನ್ನು ಕೆಳಗಿಟ್ಟು ಶರಣಾಗುವಂತೆ ಸಿಬ್ಬಂದಿ ಸೂಚಿಸಿದ್ದಾರೆ. ಆದರೆ ಆ ಮೂವರು ಅರಣ್ಯ ಸಿಬ್ಬಂದಿ ಮೇಲೆಯೇ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಅರಣ್ಯ ಸಿಬ್ಬಂದಿ ಆತ್ಮರಕ್ಷಣೆಗಾಗಿ ನಡೆಸಿದ ಕೌಂಟರ್ ಫೈರಿಂಗ್‌ನಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತ ಮೂವರನ್ನು ಹನೂರು ತಾಲೂಕಿನ ತೋಮಿಯರ್ಪಾಳ್ಯದ ನಿವಾಸಿಗಳಾದ ಕುಮಾರ್, ಆಂಥೋಣಿಸ್ವಾಮಿ ಹಾಗೂ ಪೀಟರ್ ಎಂದು ಗುರುತಿಸಲಾಗಿದೆ. ಎನ್‌ಕೌಂಟರ್ ಸುದ್ದಿ ತಿಳಿಯುತ್ತಿದ್ದಂತೆ ಆಕ್ರೋಶಗೊಂಡ ಮೃತರ ಸಂಬಂಧಿಕರು ಹಾಗೂ ಗ್ರಾಮಸ್ಥರು ಹನೂರು ತಾಲೂಕಿನ ಶಾಗ್ಯ DRFO (ಉಪ ವಲಯ ಅರಣ್ಯಾಧಿಕಾರಿ) ಕಚೇರಿಗೆ ನುಗ್ಗಿ ಪೀಠೋಪಕರಣಗಳನ್ನು ಧ್ವಂಸಗೊಳಿಸಿ ಆಕ್ರೋಶ ಹೊರಹಾಕಿದ್ದಾರೆ. ಸದ್ಯ ಮೃತದೇಹಗಳನ್ನು ಮೈಸೂರಿನ ಕೆ.ಆರ್. ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.
ಇದನ್ನೂ ಓದಿ : ಸಿಗಂದೂರು ಸೇತುವೆ ಮೇಲೆ ಮಧ್ಯರಾತ್ರಿ ಧ್ವಜಾರೋಹಣ ಮಾಡಿ ಸಂಭ್ರಮಿಸಿದ ಜನ!


















