ಬೆಂಗಳೂರು : ಕೆಪಿಎಸ್‌ಸಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಮಾಜಿ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರಿಗೆ ಸೇರಿದ ಮನೆಯಲ್ಲಿ ಬೆಳಗ್ಗೆಯಿಂದಲೇ ಇಡಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ನ್ಯೂ ಬಿಎಲ್ ರಸ್ತೆಯ ಸೀನಪ್ಪ ಲೇಔಟ್‌ನಲ್ಲಿರುವ ಹೊಯ್ಸಳ ಡ್ರೀಮ್ಸ್ ಅಪಾರ್ಟ್‌ಮೆಂಟ್‌ನ ಮೂರನೇ ಮಹಡಿಯಲ್ಲಿರುವ ಶಿವಶಂಕರಪ್ಪ ಸಾಹುಕಾರ್ ಒಡೆತನದ ಪ್ಲಾಟ್ ನಂಬರ್ 304ರಲ್ಲೂ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಕೆಪಿಎಸ್‌ಸಿ ಹಗರಣಕ್ಕೆ ಸಂಬಂಧಿಸಿದ ದಾಖಲೆಗಳು ಹಾಗೂ ಇತರ ಮಾಹಿತಿಗಾಗಿ ಇಡಿ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಇಂದು ಕೆಪಿಎಸ್‌ಸಿ ಕಚೇರಿ, ಶಿವಶಂಕರಪ್ಪ ಸಾಹುಕಾರ್ ನಿವಾಸ ಸೇರಿದಂತೆ ಒಟ್ಟು 13 ಕಡೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಸದ್ಯ ಎಲ್ಲೆಡೆ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.
ಹಿನ್ನೆಲೆ :
ಪಶುಸಂಗೋಪನೆ ಇಲಾಖೆಯಲ್ಲಿ ಖಾಲಿ ಇದ್ದ ಕೈಗಾರಿಕಾ ವಿಸ್ತರಣಾಧಿಕಾರಿಗಳ ಹುದ್ದೆಗೆ ನಕಲಿ ದಾಖಲೆಗಳನ್ನು ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಶಿವಶಂಕರಪ್ಪ ಸಾಹುಕಾರ್ ಅವರ ಪುತ್ರಿ ಸುಮ ಸಾಹುಕಾರ್ ವಿರುದ್ಧ ದೂರು ದಾಖಲಾಗಿತ್ತು. ಕೆಪಿಎಸ್‌ಸಿ ಅಧಿಕಾರಿ ಶೋಭಾ ಅವರು ಸುಮ ಸಾಹುಕಾರ್ ನಕಲಿ ದಾಖಲೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದರು. ಈ ಸಂಬಂಧ ಜುಲೈ 10ರಂದು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಪ್ರಕರಣದ ತನಿಖೆಯ ಜವಾಬ್ದಾರಿಯನ್ನು ಸರ್ಕಾರ ಸಿಐಡಿಗೆ ವಹಿಸಿತ್ತು. ಸಿಐಡಿ ತನಿಖೆ ನಡೆಸುತ್ತಿದ್ದಂತೆಯೇ ಇದೀಗ ಪ್ರಕರಣದಲ್ಲಿ ಇಡಿ ಎಂಟ್ರಿ ಆಗಿದೆ. ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣದಲ್ಲಿ ಶಿವಶಂಕರಪ್ಪ ಸಾಹುಕಾರ್ ಭಾಗಿಯಾಗಿದ್ದಾರೆ ಎಂಬ ಆರೋಪವೂ ಕೇಳಿಬಂದಿದ್ದು, ಈ ಹಿನ್ನೆಲೆ ಜುಲೈ 13ರಂದು ರಾಜ್ಯಪಾಲರು ಅವರನ್ನು ಅಮಾನತುಗೊಳಿಸಿದ್ದರು. ಬಳಿಕ ಸಿಐಡಿ ಪ್ರಕರಣದ ತನಿಖೆ ಮುಂದುವರಿಸಿತ್ತು.
13 ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ
ಸದ್ಯ ಕೆಪಿಎಸ್‌ಸಿ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣದ ವಹಿವಾಟು ನಡೆದಿದೆಯೇ ಎಂಬುದರ ಬಗ್ಗೆಯೂ ಇಡಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರಿನ ವಿವಿಧ 13 ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿರುವ ಅಧಿಕಾರಿಗಳು, ಶಿವಶಂಕರಪ್ಪ ಸಾಹುಕಾರ್ ಅವರಿಗೆ ಸೇರಿದ ಪ್ಲಾಟ್ ಹಾಗೂ ಇತರ ಸ್ಥಳಗಳಲ್ಲಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ದಾಳಿ ಮತ್ತು ಪರಿಶೀಲನೆ ಪೂರ್ಣಗೊಂಡ ಬಳಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಮಾಹಿತಿ ಹೊರಬರುವ ಸಾಧ್ಯತೆ ಇದೆ.
ಇದನ್ನೂ ಓದಿ : ತಂದೆ-ಮಗನ ಅನುಮಾನಾಸ್ಪದ ಸಾವಿಗೆ ಬಿಗ್ ಟ್ವಿಸ್ಟ್ ; ಲವ್ವರ್ ಜೊತೆ ಸೇರಿ ಪತಿ-ಪುತ್ರನನ್ನೇ ಮುಗಿಸಿದ ಪಾಪಿ ಪತ್ನಿ!



















