ಬೆಂಗಳೂರು : ನಗರದ ಕೋಟೆ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ಧರ್ಮಸಂಸ್ಥೆಯ ಅಧ್ಯಕ್ಷ ಸುರೇಶ್ ಎಸ್. ಅವರನ್ನು ಅಮಾನತುಗೊಳಿಸಿ ತನಿಖೆ ನಡೆಸಲು ರಾಜ್ಯ ಸರ್ಕಾರ ಆದೇಶಿಸಿದೆ. ಧರ್ಮಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷರ ಆಯ್ಕೆ ಹಾಗೂ ಆಡಳಿತಕ್ಕೆ ಸಂಬಂಧಿಸಿದಂತೆ ಆಡಳಿತ ಮಂಡಳಿ ಸದಸ್ಯ, ವಕೀಲ ನಿರಂಜನ್ ಗಾಣಿಗ ಅವರು ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮ ಕೈಗೊಂಡಿದೆ.
ವಕೀಲ ನಿರಂಜನ್ ಗಾಣಿಗ ಅವರು ಮೊದಲು ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿಗೆ ದೂರು ಸಲ್ಲಿಸಿದ್ದರು. ಬಳಿಕ ಜಿಲ್ಲಾಧಿಕಾರಿ ಕಚೇರಿಯಿಂದ ಈ ದೂರನ್ನು ರಾಜ್ಯ ಸರ್ಕಾರದ ಗಮನಕ್ಕೆ ತರಲಾಗಿದ್ದು, ಇದೀಗ ಸರ್ಕಾರದ ಮಟ್ಟದಲ್ಲಿ ಕ್ರಮ ಕೈಗೊಳ್ಳಲಾಗಿದೆ. ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯಿಂದ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಿಗೆ ಪತ್ರ ರವಾನೆಯಾಗಿದ್ದು, ದೂರಿನಲ್ಲಿ ಪ್ರಸ್ತಾಪಿಸಿರುವ ಎಲ್ಲಾ ಅಂಶಗಳನ್ನು ಪರಿಶೀಲಿಸಿ, ಅಗತ್ಯ ತನಿಖೆ ನಡೆಸುವಂತೆ ಸೂಚಿಸಲಾಗಿದೆ.
ವಕೀಲ ನಿರಂಜನ್ ಗಾಣಿಗ ಅವರು ಜೂನ್ 17 ಹಾಗೂ ಜೂನ್ 20ರಂದು ಸಲ್ಲಿಸಿದ್ದ ದೂರಿನಲ್ಲಿ, ಸುರೇಶ್ ಎಸ್. ಅವರನ್ನು ಧರ್ಮಸಂಸ್ಥೆಯ ಅಧ್ಯಕ್ಷರನ್ನಾಗಿ ಕಾನೂನುಬದ್ಧವಾಗಿ ಆಯ್ಕೆ ಮಾಡಲಾಗಿಲ್ಲ ಎಂದು ಆರೋಪಿಸಿದ್ದರು. ಅಲ್ಲದೆ, ಅಧ್ಯಕ್ಷರ ಆಯ್ಕೆ ಸಂದರ್ಭದಲ್ಲಿ ಸರ್ಕಾರದ ನಿಯಮಾವಳಿ ಹಾಗೂ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ಧರ್ಮಸಂಸ್ಥೆಯ ಟ್ರಸ್ಟ್ ಡೀಡ್‌ನಲ್ಲಿ ನಿಗದಿಪಡಿಸಿರುವ ನಿಯಮಗಳನ್ನು ಪಾಲಿಸಲಾಗಿಲ್ಲ ಎಂಬ ಅಂಶವನ್ನೂ ದೂರಿನಲ್ಲಿ ಪ್ರಸ್ತಾಪಿಸಿದ್ದರು.
ಈ ಹಿನ್ನೆಲೆಯಲ್ಲಿ ಸುರೇಶ್ ಅವರನ್ನು ಅಮಾನತುಗೊಳಿಸಿ, ದೂರಿನಲ್ಲಿ ಉಲ್ಲೇಖಿಸಿರುವ ಆರೋಪಗಳ ಕುರಿತು ಸಮಗ್ರ ತನಿಖೆ ನಡೆಸಲು ಸರ್ಕಾರ ಸೂಚಿಸಿದೆ. ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಸಂಬಂಧಪಟ್ಟ ದಾಖಲೆಗಳನ್ನು ಪರಿಶೀಲಿಸಿ, ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ, ಆಡಳಿತ ಮಂಡಳಿಯ ನಿರ್ಣಯಗಳು ಹಾಗೂ ಟ್ರಸ್ಟ್ ಡೀಡ್‌ನ ನಿಯಮಗಳ ಪಾಲನೆಯಾಗಿದೆಯೇ ಎಂಬುದರ ಕುರಿತು ತನಿಖೆ ನಡೆಯಲಿದೆ.
ಈಗಾಗಲೇ ಜಿಲ್ಲಾಧಿಕಾರಿ ಕಚೇರಿಯಿಂದ ಆರಂಭವಾದ ದೂರು ಪ್ರಕ್ರಿಯೆ ರಾಜ್ಯ ಸರ್ಕಾರದ ಹಂತಕ್ಕೆ ತಲುಪಿ, ಅಧ್ಯಕ್ಷರ ಅಮಾನತು ಹಾಗೂ ತನಿಖೆಗೆ ಆದೇಶ ಹೊರಬರುವ ಹಂತಕ್ಕೆ ಬಂದಿದೆ. ಹೀಗಾಗಿ ತನಿಖೆಯಲ್ಲಿ ಯಾವ ಅಂಶಗಳು ಹೊರಬರಲಿವೆ, ಸುರೇಶ್ ಅವರ ಅಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿದಂತೆ ಮುಂದಿನ ನಿರ್ಧಾರ ಏನಾಗಲಿದೆ ಎಂಬುದು ಇದೀಗ ಕುತೂಹಲಕ್ಕೆ ಕಾರಣವಾಗಿದೆ.
ಇದನ್ನೂ ಓದಿ : ಫರ್ನಾಂಡೊ ಜೊತೆಗಿನ ಜಟಾಪಟಿ ; ಜೈಸ್ವಾಲ್‌ಗೆ ಐಸಿಸಿ ಶಿಕ್ಷೆಯ ಭೀತಿ


















