ಬೆಂಗಳೂರು : ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದ ಮಹದೇಶ್ವರ ದೇವಸ್ಥಾನದ ಬಳಿ ವ್ಹೀಲಿಂಗ್ ಪುಂಡರ ಹುಚ್ಚಾಟಕ್ಕೆ ಟಿಟಿ ವಾಹನ ಭೀಕರ ಅಪಘಾತಕ್ಕೀಡಾಗಿದೆ. ನಿಯಂತ್ರಣ ತಪ್ಪಿದ ಟಿಟಿ ವಾಹನ ಎಲೆಕ್ಟ್ರಿಕ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಐವರು ಗಾಯಗೊಂಡಿದ್ದಾರೆ.
ಲಗ್ಗೆರೆ ಸಮೀಪದ ಯುವಕರು ನಿನ್ನೆ ಮಧ್ಯರಾತ್ರಿ ಟಿಟಿ ವಾಹನದಲ್ಲಿ ತೆರಳುತ್ತಿದ್ದರು. ಐದಾರು ಮಂದಿ ವಾಹನದಲ್ಲಿದ್ದು, ರವಿ ಎಂಬಾತ ವಾಹನ ಚಲಾಯಿಸುತ್ತಿದ್ದ ಎನ್ನಲಾಗಿದೆ. ಈ ವೇಳೆ ವ್ಹೀಲಿಂಗ್ ಮಾಡುತ್ತಿದ್ದವರನ್ನು ತಪ್ಪಿಸಲು ಹೋಗಿ ವಾಹನ ನಿಯಂತ್ರಣ ಕಳೆದುಕೊಂಡು ಎಲೆಕ್ಟ್ರಿಕ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ಮನೋಜ್ ಎಂಬಾತ ಮೃತಪಟ್ಟಿದ್ದು, ಐವರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದ್ದು, ಮನೋಜ್ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.
ಘಟನೆ ಬಳಿಕ ಆಂಬುಲೆನ್ಸ್ ಸ್ಥಳಕ್ಕೆ ಬರಲು ಸುಮಾರು ಒಂದು ಗಂಟೆ ತಡವಾಯಿತು ಎಂಬ ಆರೋಪವೂ ಕೇಳಿಬಂದಿದೆ. ಆಂಬುಲೆನ್ಸ್ನಲ್ಲಿ ಚಾಲಕ ಮಾತ್ರ ಇದ್ದರು ಎನ್ನಲಾಗಿದ್ದು, ಇದರಿಂದ ಸ್ಥಳೀಯರು ಆಕ್ರೋಶಗೊಂಡು ಗಲಾಟೆ ನಡೆಸಿದ್ದಾರೆ. ವ್ಹೀಲಿಂಗ್ ಪುಂಡರ ವಿರುದ್ಧ ಕ್ರಮ ಕೈಗೊಳ್ಳದ ಪೊಲೀಸರ ವಿರುದ್ಧವೂ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವ್ಹೀಲಿಂಗ್ಗೆ ಕಡಿವಾಣ ಹಾಕಿ, ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
ಇದನ್ನೂ ಓದಿ : ನವೆಂಬರ್ 1ರಿಂದ ಇವರಿಗೆಲ್ಲ ರೈಲುಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ : ಇದು ಐತಿಹಾಸಿಕ ನಿರ್ಧಾರ



















