ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್ನಲ್ಲಿ ಸಿಇಸಿ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಹೈಡ್ರಾಮಾವೊಂದು ನಡೆದಿದ್ದು, ವಶಕ್ಕೆ ಪಡೆಯಲಾಗಿದ್ದ ಪ್ರತಿಭಟನಾಕಾರರನ್ನು ಕರೆದೊಯ್ಯುತ್ತಿದ್ದ ಪೊಲೀಸ್ ಬಸ್ಸಿನ ಕೀಲಿಕೈಯನ್ನೇ (ಕೀ) ಮಹಿಳೆಯೊಬ್ಬಳು ಕಸಿದುಕೊಂಡು ಓಡಿಹೋಗಿರುವ ಘಟನೆ ಬೆಳಕಿಗೆ ಬಂದಿದೆ. ಈ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿವೆ.ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಚುನಾವಣಾ ಆಯೋಗಕ್ಕೆ ಸಂಬಂಧಿಸಿದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜಂತರ್ ಮಂತರ್ನಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಲೇ ಇದೆ. ಈ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ವಾಗ್ವಾದ ನಡೆದು, ಹಲವರನ್ನು ಪೊಲೀಸರು ವಶಕ್ಕೆ ಪಡೆದು ಬಸ್ನಲ್ಲಿ ಕೂರಿಸಿದ್ದರು. ಬಸ್ ಚಾಲಕ ವಾಹನವನ್ನು ಚಲಾಯಿಸಲು ಸಿದ್ಧತೆ ನಡೆಸುತ್ತಿದ್ದಂತೆ, ಏಕಾಏಕಿ ಬಂದ ಮಹಿಳೆಯೊಬ್ಬಳು ಚಾಲಕನ ಕೈಯಲ್ಲಿದ್ದ ಕೀಲಿಕೈಯನ್ನು ಕಸಿದುಕೊಂಡು ಜನಸಂದಣಿಯಲ್ಲಿ ಕಣ್ಮರೆಯಾಗಿದ್ದಾಳೆ. ಕೆಲವರು ಆಕೆಯನ್ನು ತಡೆಯಲು ಯತ್ನಿಸಿದರೂ ಸಾಧ್ಯವಾಗಲಿಲ್ಲ.
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್
ಘಟನೆಗೆ ಸಂಬಂಧಿಸಿದ ವಿಡಿಯೋ ಎಕ್ಸ್ (X) ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಲಕ್ಷಾಂತರ ವೀಕ್ಷಣೆಗಳನ್ನು ಪಡೆದಿದೆ. ಮತ್ತೊಂದು ವಿಡಿಯೋದಲ್ಲಿ ಚಾಲಕ ತನ್ನ ಬಳಿಯಿದ್ದ ಕೀಲಿಕೈಯನ್ನು ಮಹಿಳೆ ಒಯ್ದಿದ್ದಾಗಿ ಹೇಳುತ್ತಿರುವುದು ಹಾಗೂ ಕೀ ಇಲ್ಲದ ಕಾರಣ ಪೊಲೀಸರೇ ಬಸ್ಸನ್ನು ತಳ್ಳಿಕೊಂಡು ಹೋಗುತ್ತಿರುವುದು ದಾಖಲಾಗಿದೆ. ಈ ಘಟನೆಗೆ ಸಾಮಾಜಿಕ ಜಾಲತಾಣಗಳಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೆಲವರು ಮಹಿಳೆಯ ಧೈರ್ಯವನ್ನು ಮೆಚ್ಚಿಕೊಂಡಿದ್ದರೆ, ಇನ್ನು ಕೆಲವರು ಕಾನೂನು ಕೈಗೆತ್ತಿಕೊಂಡು ಸರ್ಕಾರಿ ವಾಹನದ ಸಂಚಾರಕ್ಕೆ ಅಡ್ಡಿಪಡಿಸಿದ್ದಕ್ಕೆ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿದ್ದಾರೆ.
ಹಿಂಸಾರೂಪಕ್ಕೆ ತಿರುಗಿದ್ದ ಪ್ರತಿಭಟನೆ
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಭಾನುವಾರ ನಡೆದ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪ್ರತಿಭಟನಾಕಾರರು ಬ್ಯಾರಿಕೇಡ್ಗಳನ್ನು ಮುರಿದು, ವಶಕ್ಕೆ ಪಡೆದವರನ್ನು ಕರೆದೊಯ್ಯುತ್ತಿದ್ದ ಬಸ್ಗಳನ್ನು ತಡೆಯಲು ಯತ್ನಿಸಿದರು. ಈ ವೇಳೆ ನಡೆದ ಸಂಘರ್ಷದಲ್ಲಿ ಸುಮಾರು 15 ದೆಹಲಿ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದು, 110ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ :2020ರ ದೆಹಲಿ ಗಲಭೆ : ರಾಜಕಾರಣಿಗಳ ವಿರುದ್ಧFIR ದಾಖಲಿಸಲು ಕೋರಿದ್ದ ಎಲ್ಲಾ 15 ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್!



















