ಬೆಂಗಳೂರು:ರಾಜ್ಯದಲ್ಲಿ ಈಶಾನ್ಯ ಮಾರುತಗಳ ಪ್ರಭಾವದಿಂದಾಗಿ ಅಕ್ಟೋಬರ್ 22ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒಳನಾಡು, ಕರಾವಳಿ ಮತ್ತು ಉತ್ತರ ಒಳನಾಡಿನ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಗುಡುಗು ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆಯಿದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳವರೆಗೆ ಗುಡುಗು ಸಹಿತ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಕಡಲ ತೀರದ ಈ ಭಾಗಗಳಲ್ಲಿ ಆಗಾಗ್ಗೆ ಬಿರುಗಾಳಿ ಬೀಸುವ ಸಾಧ್ಯತೆಯಿರುವುದರಿಂದ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.



















