ಬೆಂಗಳೂರು: ಕರ್ನಾಟಕದಲ್ಲಿ ನೈಋತ್ಯ ಮುಂಗಾರು (Southwest Monsoon) ಆರ್ಭಟ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಾದ್ಯಂತ ಅಕ್ಟೋಬರ್ 25 ರವರೆಗೆ ಗುಡುಗು ಸಹಿತ ಉತ್ತಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದ್ದು, ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ 25 ರವರೆಗೆ ಮಳೆ
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಗಡಿಭಾಗವಾದ ಕಾಸರಗೋಡಿನಲ್ಲಿ ಹಗಲು ವೇಳೆ ಹಗುರ ಮೋಡ ಕವಿದ ವಾತಾವರಣವಿರಲಿದೆ. ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಅಲ್ಲಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಕರಾವಳಿ ತೀರದಲ್ಲಿ ಅ. 25 ರವರೆಗೆ ಮಳೆಯ ಪ್ರಭಾವ ಹೀಗೆಯೇ ಮುಂದುವರಿಯಲಿದೆ.
ಮಲೆನಾಡು ಭಾಗಕ್ಕೆ ಸಿಡಿಲು-ಗಾಳಿ ಭೀತಿ
ಮಲೆನಾಡಿನ ಪ್ರಮುಖ ಜಿಲ್ಲೆಗಳಾದ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನದ ಸಕಲೇಶಪುರ ಭಾಗಗಳಲ್ಲಿ ಅಕ್ಟೋಬರ್ 24 ರವರೆಗೆ ಮಳೆಯ ಆರ್ಭಟ ಜೋರಿರಲಿದೆ. ಈ ಭಾಗಗಳಲ್ಲಿ ಸಂಜೆ ಮತ್ತು ರಾತ್ರಿ ಬಲವಾದ ಗಾಳಿ ಬೀಸಲಿದ್ದು, ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಹೆಚ್ಚಿದೆ.
ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆ
ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ ಹಾಗೂ ಬಳ್ಳಾರಿ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಸಂಜೆ ಅಥವಾ ರಾತ್ರಿ ವೇಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಗಾಳಿಯ ಒತ್ತಡ ಹೆಚ್ಚಿರಲಿದ್ದು, ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಅ.24 ರವರೆಗೆ ಇದೇ ವಾತಾವರಣ ಮುಂದುವರಿಯಲಿದೆ.
ದಕ್ಷಿಣ ಒಳನಾಡಿನಲ್ಲಿ ಗುಡುಗಿನ ಆರ್ಭಟ
ರಾಜಧಾನಿ ಬೆಂಗಳೂರು, ಮೈಸೂರು, ಮಂಡ್ಯ, ತುಮಕೂರು ಸೇರಿದಂತೆ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಸಂಜೆ ಅಥವಾ ರಾತ್ರಿ ವೇಳೆ ಬಲವಾದ ಸಿಡಿಲು-ಗುಡುಗು ಸಹಿತ ಉತ್ತಮ ಮಳೆಯಾಗುವ ಮುನ್ಸೂಚನೆ ಇದೆ. ಜನರು ಸಂಜೆ ವೇಳೆ ಹೊರಗಡೆ ಹೋಗುವಾಗ ಜಾಗರೂಕರಾಗಿರಲು ಸೂಚಿಸಲಾಗಿದೆ.



















