ಬೆಂಗಳೂರಿನ ಕೆ.ಆರ್ ಮಾರ್ಕೆಟ್ ಮತ್ತು ಗಿರಿನಗರ ಸೇರಿದಂತೆ ಹಲವೆಡೆ ಇಂದು ಬೆಳ್ಳಂಬೆಳಗ್ಗೆ ಮಳೆರಾಯನ ಆರ್ಭಟ ಜೋರಾಗಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಅಕ್ಟೋಬರ್ 24ರವರೆಗೆ ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ಕರಾವಳಿ ಹಾಗೂ ಮಲೆನಾಡಿನಲ್ಲಿ ಉತ್ತಮ ಮಳೆಯಾಗಲಿದೆ. ಮುಂಬರುವ ಚಳಿಗಾಲದಲ್ಲಿ ಚಳಿಯ ತೀವ್ರತೆ ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದ್ದು, ದಕ್ಷಿಣ ಒಳನಾಡಿನ ಚಾಮರಾಜನಗರ ಹಾಗೂ ಮೈಸೂರಿನಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಇದರೊಂದಿಗೆ ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ ಮತ್ತು ರಾಮನಗರದಲ್ಲಿ ಸಾಧಾರಣ ಮಳೆಯಾಗಲಿದ್ದು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಹಾಗೂ ತುಮಕೂರಿನಲ್ಲಿ ತುಂತುರು ಮಳೆಯಾಗುವ ಸಂಭವವಿದೆ. ಆದರೆ ಬಳ್ಳಾರಿ, ಚಿಕ್ಕಬಳ್ಳಾಪುರ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.


















